ಉಡುಪಿಯಲ್ಲಿ 103 ಡೆಂಘೆ ಪ್ರಕರಣ, ತುರ್ತು ನಿಯಂತ್ರಣ ಕ್ರಮಕ್ಕೆ ಡಿಸಿ ಜಿ.ಜಗದೀಶ್ ಸೂಚನೆ

dengue
Published on

ಉಡುಪಿ: ಡೆಂಘೆ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, ಪ್ರಕರಣ ಹೆಚ್ಚಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತುರ್ತು ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಕುರಿತಂತೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶುಕ್ರವಾರ ವೀಡಿಯೋ ಸಂವಾದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲೇರಿಯಾ, ಡೆಂಘೆ, ಚಿಕೂನ್‌ಗುನ್ಯಾ ಹರಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಪ್ರಸ್ತುತ 11 ಮಲೇರಿಯ ಪ್ರಕರಣ ವರದಿಯಾಗಿದ್ದು, 103 ಡೆಂಘೆ ಪ್ರಕರಣಗಳು ವರದಿಯಾಗಿದೆ. ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ನೀರು ನಿಲ್ಲದಂತೆ ಹಾಗೂ ಸೊಳ್ಳೆ ನಿಯಂತ್ರಣಾ ಮತ್ತು ನಾಶ ಕುರಿತು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು, ಚರಂಡಿಯಲ್ಲಿ ನೀರು ಸರಾಗವಾಗಿ ಹರಿದುಹೋಗುವಂತೆ ಕ್ರಮ ಕೈಗೊಳ್ಳಬೇಕು, ಅಗತ್ಯವಿದ್ದಲ್ಲಿ ಲಾರ್ವಿಸೈಡ್ ಸಿಂಪಡಿಸಬೇಕು. ಗಣಿ ಇಲಾಖೆ ವತಿಯಿಂದ ಗಣಿ ಪ್ರದೇಶದಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು, ಅನವಶ್ಯಕ ಕ್ವಾರಿ ಮುಚ್ಚಬೇಕು ಹಾಗೂ ಕ್ವಾರಿಗಳಲ್ಲಿ ಲಾರ್ವಾಹಾರಿ ಮೀನುಗಳನ್ನು ಬಿಡಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಆಗಮಿಸುತ್ತಿದ್ದು, ಅವರು ಬೇರೆ ಕಡೆಯಿಂದ ಸಾಂಕ್ರಾಮಿಕ ರೋಗಪೀಡಿತರಾಗಿ ಬಂದು ಇಲ್ಲೂ ರೋಗ ಹರಡುವ ಸಾಧ್ಯತೆಗಳಿವೆ. ಅವರನ್ನು ಸೂಕ್ತ ರೀತಿಯಲ್ಲಿ ಆರೋಗ್ಯ ಪರೀಕ್ಷೆಗೆ ಒಳಪಡಿಸಬೇಕು. ಬಂದರು ಪ್ರದೇಶದಲ್ಲಿ ಬೋಟ್‌ಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುವ ಭೀತಿಯಿದ್ದು ಆ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ, ಸೊಳ್ಳೆಗಳ ಉತ್ಪತ್ತಿ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಗದೀಶ್ ಸೂಚಿಸಿದರು.

ಜಿ.ಪಂ ಸಿಇಒ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್‌ಒ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ಸಭೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net