ಡೆಂಗ್ಯೂ ಹಾಗೂ ಕೀಟಜನ್ಯ ರೋಗಗಳ ನಿಯಂತ್ರಣಕ್ಕೆ ಕ್ರಮ ವಹಿಸಿ

20GDG06
Published on

ಗದಗ:  ಈಗಾಗಲೇ ಮಳೆಗಾಲ ಆರಂಭವಾಗಿರುವುದಿಂದ  ವಿವಿಧೆಡೆ ನಿಂತ ನೀರಿನಿಂದ ಡೆಂಗ್ಯೂ ಮತ್ತು ಚಿಕುಂಗುನ್ಯಾ ಹಾಗೂ ಇತರೆ ಕೀಟಜನ್ಯ ರೋಗಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತವೆ. ಈ ನಿಟ್ಟಿನಲ್ಲಿ ಇಂತಹ ರೋಗಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜರುಗಿದ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರೋಗ್ಯ ಇಲಾಖೆಯವರು ಡೆಂಗ್ಯೂ ಹಾಗೂ ಕೀಟಜನ್ಯ ರೋಗಗಳು ಬಾರದಂತೆ  ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತೆಯ ಕುರಿತು ಹಾಗೂ   ಸ್ವಯಂ ರಕ್ಷಣಾ ವಿಧಾನಗಳನ್ನು ಬಳಸುವ ಕುರಿತು ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ಅರಿವು ಮೂಡಿಸಬೇಕೆಂದು ನಿರ್ದೇಶನ ನೀಡಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ.ವೆಂಕಟೇಶ ರಾಠೋಡ ಅವರು ಮಾತನಾಡಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿದಂತೆ 2024 ರ ಮೇ ವರೆಗೆ  703 ಜನರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷಿಸಿದಾಗ 36 ಡೆಂಗ್ಯೂ ಪ್ರಕರಣಗಳು ಖಚಿತಪಟ್ಟಿವೆ.  ಚಿಕೂನ್ಯ ಗುನ್ಯಾ ರೋಗಕ್ಕೆ ಸಂಬಂಧಿಸಿದಂತೆ 2024 ರ ಮೇ ವರಗೆ  98 ಜನರ ರಕ್ತದ ಮಾದರಿ ಪರೀಕ್ಷಿಸಲಾಗಿದ್ದು  7 ಪ್ರಕರಣಗಳು ಖಚಿತಪಟ್ಟಿವೆ ಹಾಗೂ  ಮಲೇರಿಯಾ ರೋಗಕ್ಕೆ ಸಂಬಂಧಿಸಿದಂತೆ 150169 ಜನರ ರಕ್ತ ಲೇಪನ ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ 1 ಮಲೇರಿಯಾ ಪ್ರಕರಣ ಖಚಿತಪಟ್ಟಿವೆ.  ಜಿಲ್ಲೆಯ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಳನ್ನು ನಿಯೋಜಿಸಿ ಲಾರ್ವಾ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ ಎಂದರು.  

ಡೆಂಗ್ಯೂ ಮತ್ತು ಚಿಕುಂಗುನ್ಯಾ ರೋಗಗಳು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತವೆ. ಈಡಿಸ್ ಸೊಳ್ಳೆಗಳು ಮನೆಯಲ್ಲಿರುವ ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್‍ಗಳು, ಡ್ರಮ್‍ಗಳು, ಹೂವಿನಕುಂಡ ಮುಂತಾದವುಗಳಲ್ಲದೇ ಮನೆ ಸುತ್ತಮುತ್ತ ಬಯಲಲ್ಲಿ ಬೀಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್‍ಕಪ್‍ಗಳು, ಟೈರ್‍ಗಳು, ಎಳೆನೀರಿನಚಿಪ್ಪು ಮತ್ತು ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ. ಈ ಕುರಿತಂತೆ ಗ್ರಾಮಗಳಲ್ಲಿ ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಂದ ಆರೋಗ್ಯ ಶಿಕ್ಷಣ ನೀಡಲಾಗಿದೆ ಎಂದು ಸಭೆಗೆ ವಿವರಿಸಿದರು.  

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಆರ್.ಸಿ.ಎಚ್.ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಬಿ.ಸಿ.ಕರಿಗೌಡ್ರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ.ರಡ್ಡೇರ,  ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಅರುಂಧತಿ ಕುಲಕರ್ಣಿ, ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.   

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net