

ಬೆಂಗಳೂರು: ಡೆಂಗ್ಯೂ ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಗೈಡ್ಲೈನ್ಸ್ ಹೊರಡಿಸಿದ್ದಾರೆ.
ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು.
ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು.
ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಈಗಾಗಲೇ ಇರುವ ಚರಂಡಿಗಳಲ್ಲಿ ಶೇಖರಣೆಗೊಂಡಿರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮತ್ತು ಚರಂಡಿಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಕುಡಿಯುವ ನೀರಿನ ಪೂರೈಕೆ ನಳಗಳಿಗೆ ಕಂಟ್ರೋಲ್ ವಾಲ್ಸ್ ಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಗುಂಡಿಗಳಲ್ಲಿ ನೀರು ಶೇಖರಣೆಯಾಗುವುದನ್ನು ಹಾಗೂ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬಹುದು.
ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು.
ಕೊಳವೆ ಬಾವಿಗಳು ಹಾಗೂ ನೀರು ಸರಬರಾಜು ಪೈಪುಗಳು ಒಳಚರಂಡಿಯಿಂದ ದೂರದಲ್ಲಿರುವಂತೆ ಕ್ರಮವಹಿಸುವುದು. ಮತ್ತು ಪೈಪುಗಳಲ್ಲಿ ನೀರು ಸೋರಿಕೆಯಾಗದಂತೆ ನಿಗಾವಹಿಸಬೇಕು.
ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಎಳೆನೀರು ಬುರುಡೆಗಳನ್ನು ನಾಲು, ಭಾಗಗಳಾಗಿ ಒಡೆದು, ಬೋರಲು ಇಡುವಂತೆ ಸೂಚಿಸಬೇಕು, ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು.