ಸಮರ್ಪಕವಾಗಿ ಪ.ಜಾತಿ ಸಮೀಕ್ಷಾ ಕಾರ್ಯ ನಿರ್ವಹಿಸಿ...

DC Meeting
Published on

ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಲಹೆ

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಎಚ್​.ಎನ್​. ನಾಗಮೋಹನದಾಸ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ಈಗಾಗಲೇ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ. ಸೂಚನೆ ಪ್ರಕಾರ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸಲಹೆ ನೀಡಿದರು.

ಉಡುಪಿಯ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್​ ವಿಡಿಯೋ ಕಾನ್ಫರೆನ್ಸ್​ ಸಭಾಂಗಣದಲ್ಲಿ ಏ.24ರಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ಮೂರು ಹಂತದಲ್ಲಿ ಸಮೀಕ್ಷೆ

ಜಿಲ್ಲೆಯಲ್ಲಿ ಮೇ 5ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಿಸುವ ಸಮೀಕ್ಷಾ ಕಾರ್ಯವು ಶಾಲಾ ಶಿಕ್ಷಕರಿಂದ ನಡೆಯಲಿದೆ. ಈ ವಿಚಾರವಾಗಿ ಮನೆ ಮನೆಗೆ ಆಗಮಿಸುವ ಶಿಕ್ಷಕರಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ತಾಲೂಕು ಮಟ್ಟದ ಸಮಿತಿ ರಚನೆ

ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದ್ದು, ತಾಲೂಕಿನ ತಹಸೀಲ್ದಾರ್​, ತಾಪಂ ಇಒ ಮತ್ತು ತಾಲೂಕು ಮಟ್ಟದ ಇತರ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಸಮೀಕ್ಷೆಯ ಮೇಲ್ವಿಚಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರನ್ನು ನಿಯೋಜಿಸಲು ಉಪನಿರ್ದೇಶಕರು ಕ್ರಮ ವಹಿಸುವಂತೆ ತಿಳಿಸಲಾಯಿತು. ಗ್ರಾಪಂ ಮಟ್ಟದಲ್ಲಿ ಪಿಡಿಒಗಳು ಹಾಗೂ ತಾಲೂಕು ನೋಡಲ್​ ಅಧಿಕಾರಿಗಳು ಸಮೀಕ್ಷೆಯ ಸಂಪೂರ್ಣ ಮೇಲುಸ್ತುವಾರಿ ವಹಿಸಬೇಕು ಎಂದರು.

ಕುಟುಂಬಗಳ ದತ್ತಾಂಶ ಸಂಗ್ರಹಿಸುವ ನಿಯಮಗಳ ಕುರಿತು ಸಭೆಯಲ್ಲಿದ್ದ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆಬೀದ ಗದ್ಯಾಳ, ಜಿಪಂ ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್​, ಸಹಾಯಕ ಕಮಿಷನರ್​ ರಶ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಡಯಟ್​ ಉಪ ಪ್ರಾಂಶುಪಾಲ ಡಾ. ಅಶೋಕ ಕಾಮತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶ್ಯಾಮಲಾ ಸಿ.ಕೆ. ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ 75 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಸಮೀಕ್ಷಾ ಕಾರ್ಯಕ್ಕೆ ಸಾವಿರಕ್ಕೂ ಅಧಿಕ ಗಣತಿದಾರರ ಅಗತ್ಯತೆ ಇದೆ. ಜಿಲ್ಲಾ ಮಾಸ್ಟರ್​ ಟೆನರ್​ಗಳಿಗೆ ಏ.28ರಂದು ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ತರಬೇತಿ ನೀಡಲಾಗುವುದು. ಮಾರ್ಗಸೂಚಿ ಪ್ರಕಾರ ಎಲ್ಲ ಇಲಾಖೆಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು. | ಡಾ. ಕೆ.ವಿದ್ಯಾಕುಮಾರಿ. ಉಡುಪಿ ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net