

ಮೈಸೂರು: ನಗರದ ರಾಯನಕೆರೆ ಆವರಣದಲ್ಲಿ ನಿರ್ಮಾಣ ಮಾಡಿರುವ ಘನತ್ಯಾಜ್ಯ ನಿರ್ವಹಣಾ ಘಟಕ ಅತ್ಯುತ್ತಮವಾಗಿದ್ದು, ಇದೇ ಮಾದರಿಯಲ್ಲಿ ರಾಜ್ಯದ ಇತರೆ ನಗರ ಸ್ಥಳೀಯ ಸಂಸ್ಥೆಗಳಲ್ಲೂ ಘಟಕ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.
ನಗರ ಪಾಲಿಕೆ ನಿರ್ವಹಣೆ ಮಾಡುತ್ತಿರುವ ರಾಯನ ಕೆರೆ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಒಣ ಕಸ ಹಾಗೂ ಹಸಿ ಕಸ ಬೇರ್ಪಡಿಸುವ ಕಾರ್ಯ ಹಾಗೂ ತಾಜ್ಯವನ್ನು ಸಂಸ್ಕರಣೆ ಮಾಡುವ ಕಾರ್ಯ ಉತ್ತಮವಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಘನ ತ್ಯಾಜ್ಯ ನಿರ್ವಹಣಾ ಘಟಕದ ಸುತ್ತಾ 5 ರಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಜನರ ಸಮೀಕ್ಷೆ ನಡೆಸಿ ಜನರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಘಟಕದ ಸುತ್ತಮುತ್ತ ಅಕ್ರಮವಾಗಿ ಬಡಾವಣೆ, ಕಟ್ಟಡಗಳು ನಿರ್ಮಾಣ ಆಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಯನ ಕೆರೆಯಲ್ಲಿ ಮಲಿನ ನೀರು ಸಂಸ್ಕರಣ ಘಟಕದಲ್ಲಿ ಮಲಿನ ನೀರನ್ನು ಸಂಸ್ಕರಿಸಿ, ಕೆರೆಗಳಿಗೆ ಬಿಡುಗಡೆ ಮಾಡುವ ವ್ಯವಸ್ಥೆ ಉತ್ತಮವಾಗಿದೆ. ನೀರು ಸಂಸ್ಕರಣ ಘಟಕದಲ್ಲಿ ಬೆಳೆದಿರುವ ಗಿಡ ಗಂಟೆಯನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು.
ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುವವರಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಹಾಗೂ ಅವರಿಗೆ ಉತ್ತಮವಾದ ಗ್ಲೌಸ್, ಬೂಟ್ ಹಾಗೂ ಮಾಸ್ಕ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ನಗರ ಪಾಲಿಕೆ ಆಯುಕ್ತ ಶೇಕ್ ನತ್ವೀರ್ ಆಸಿಫ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಉಮಾ ಶಂಕರ್, ತಹಶೀಲ್ದಾರ್ ಮಹೇಶ್ ಕುಮಾರ್ ಹಾಗೂ ಇತರರು ಇದ್ದರು.