ಮೂಲ ಸೌಕರ್ಯ ಕಲ್ಪಿಸದಿದ್ದರೆ ಮತದಾನ ಬಹಿಷ್ಕಾರ

12 HANUR 2
Published on

ಹನೂರು: ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಭರವಸೆ ನೀಡಿದರೂ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡದ ಕಾರಣ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಇಂಡಿಗನತ್ತ ಗ್ರಾಮಸ್ಥರು ನಿರ್ಧರಿಸಿದ್ದಾರೆ.


ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಕರ್ಯಗಳಿಂದ ಗ್ರಾಮ ವಂಚಿತವಾಗಿದ್ದು, ಕಷ್ಟದ ನಡುವೆ ಜೀವನ ನಡೆಸುತ್ತಿದ್ದಾರೆ. ಅಗತ್ಯ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮೂಲಸೌಕರ್ಯ ಒದಗಿಸದಿದ್ದಲ್ಲಿ ಲೋಕಸಭೆ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಎಚ್ಚರಿಸಿದರು.


ಈ ಹಿನ್ನೆಲೆಯಲ್ಲಿ ಮಾ.25ರಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿ ಅಗತ್ಯ ಮೂಲಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಮಹಿಳೆಯರು ನೀರಿಗಾಗಿ ತೋಡು ಬಾವಿಗೆ ಅಲೆಯುವಂತಹ ಪರಿಸ್ಥಿತಿ ಬಂದೊದಗಿದೆ. ಆದ್ದರಿಂದ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಮೂಲಸೌಕರ್ಯ ಒದಗಿಸಬೇಕು. ಇಲ್ಲವಾದಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಮತ್ತೆ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net