ಸೌಲಭ್ಯಗಳಿದ್ದರೂ ಸಾಕ್ಷರತೆ ಪ್ರಮಾಣ ಏಕೆ ಹೆಚ್ಚುತ್ತಿಲ್ಲ?

20Manju2
ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ದಿಶಾ ಸಭೆಯಲ್ಲಿ ಸಂಸದರಾದ ಜಗದೀಶ ಶೆಟ್ಟರ್, ಪ್ರಿಯಾಂಕಾ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ರಾಹುಲ ಶಿಂಧೆ ಇದ್ದರು.
Published on

ಬೆಳಗಾವಿ: ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕಾರ್ಯಕ್ರಮ ನೀಡುತ್ತಿದ್ದರೂ ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚುತ್ತಿಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣೆ ಸಮಿತಿ(ದಿಶಾ) ಸಭೆಯಲ್ಲಿ ಮಾತನಾಡಿದ ಅವರು, ಸಾಕ್ಷರತೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರಗಳು ಹೊಸ ಕಾರ್ಯಕ್ರಮ ರೂಪಿಸುತ್ತಿವೆ. ನೂರಾರು ಕೋಟಿ ರೂ. ವೆಚ್ಚದಲ್ಲಿ ಸೌಲಭ್ಯ ಕಲ್ಪಿಸುತ್ತಿವೆ. ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದ್ದರೂ ಸಾಕ್ಷರತೆ ಪ್ರಮಾಣ ಹೆಚ್ಚುತ್ತಿಲ್ಲ ಎಂದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದರೆ ಮಾತ್ರ ಹಾಜರಾತಿ ಪ್ರಮಾಣ ಹೆಚ್ಚಿಸಲು ಸಾಧ್ಯ. ಪ್ರತಿಯೊಂದು ಶಾಲೆಗೆ ಶುದ್ಧ ಕುಡಿಯುವ ನೀರು, ಶೌಚಗೃಹ ಸೌಲಭ್ಯ ಕಲ್ಪಿಸಬೇಕು. ಡಿಡಿಪಿಐ, ಬಿಇಒ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಸಾಮಾಜಿಕ ಜವಾಬ್ದಾರಿ ನಿಧಿ(ಸಿಎಸ್‌ಆರ್) ಸೌಲಭ್ಯ ಪಡೆದುಕೊಳ್ಳಲು ಬ್ಯಾಂಕ್, ಖಾಸಗಿ ಕಂಪನಿಗಳ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ ಹತ್ತು ವರ್ಷಗಳ ಹಿಂದೆ ಶೇ.75ರಷ್ಟಿದ್ದ ಸಾಕ್ಷರತೆ ಪ್ರಮಾಣ 2024ರಲ್ಲೂ ಅಷ್ಟೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೆಜೆಎಂ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಿ: ಜಲಜೀವನ ಮಿಷನ್ ಯೋಜನೆಯಲ್ಲಿ ನೂರಾರು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರೂ ಮನೆ ಮನೆಗೆ ನೀರು ಬರುತ್ತಿಲ್ಲ. ಪೈಪಲೈನ್‌ಗಾಗಿ ರಸ್ತೆಗ ಅಗೆಯಲಾಗಿದ್ದು, ಮರಳಿ ದುರಸ್ತಿ ಮಾಡಿಲ್ಲ. ಕಾಮಗಾರಿ ಪರಿಶೀಲನೆ ನಡೆಸದೆ ಹಸ್ತಾಂತರಿಸಲಾಗಿದೆ. ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷೃ, ಕಳಪೆ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಸಂಸದರಾದ ಜಗದೀಶ ಶೆಟ್ಟರ್, ಈರಣ್ಣ ಕಡಾಡಿ ಜಿಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಗೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಇತರರಿದ್ದರು.

ಹಕ್ಕುಚ್ಯುತಿ ಮಂಡನೆಯ ಎಚ್ಚರಿಕೆ

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ, ಉದ್ಘಾಟನೆ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುತ್ತಿಲ್ಲ. ಸಂಬಂಧ ಇಲ್ಲದವರಿಂದ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವುದು ಮತ್ತೆ ಮರುಕಳಿಸಿದರೆ ಅಧಿಕಾರಿಗಳ ವಿರುದ್ಧ ಸಂಸತ್‌ನಲ್ಲಿ ಹಕ್ಕುಚ್ಯುತಿ ಮಂಡಿಸಬೇಕಾಗುತ್ತದೆ ಎಂದು ಜಗದೀಶ ಶೆಟ್ಟರ ಎಚ್ಚರಿಕೆ ನೀಡಿದರು.

ನರೇಗಾದಲ್ಲಿ ಗುತ್ತಿಗೆದಾರರ ಹಾವಳಿ ತಪ್ಪಿಸಿ

ನರೇಗಾ ಯೋಜನೆಯಡಿ ಗುತ್ತಿಗೆದಾರರ ಹಾವಳಿ ಹೆಚ್ಚಾಗಿದ್ದು, ಅಕ್ರಮಕ್ಕೆ ದಾರಿ ಮಾಡಿಕೊಡುತ್ತಿದೆ. ಕೆಲಸ ಮಾಡುವವರೇ ಬೇರೆ, ಕೂಲಿ ಹಣ ಜಮೆ ಆಗುತ್ತಿರುವುದು ಮತ್ತೊಬ್ಬರಿಗೆ. ಪ್ರತಿ ವಾರ ನರೇಗಾ ಕೂಲಿ ಹಣ ಪಾವತಿಸಬೇಕು. ವಿಳಂಬ ಮಾಡಿದರೆ ಕೂಲಿಕಾರರು ಕೆಲಸಕ್ಕೆ ಬರುವುದಿಲ್ಲ .
ಜಗದೀಶ ಶೆಟ್ಟರ್ ಸಂಸದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net