

ಹುಬ್ಬಳ್ಳಿ : ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಬ್ಬ ಯುವತಿ ಅಂಜಲಿಯ ಕೊಲೆಯೇ ಸಾಕ್ಷಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೋಶಿ,ಭಗ್ನ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ ಹುಡುಗಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ಮತ್ತೆ ಜರುಗಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದು ವಿಷಾದಕರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಿನ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಅಪರಾಧ ಹಾಗೂ ಕೊಲೆ, ಸುಲಿಗೆ ಮಾಡುವ ಪಾತಕಿಗಳಿಗೆ ನಾವು ಏನು ಮಾಡಿದರೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಬಹುದೆಂಬ ಭಂಡ ಧೈರ್ಯ ಬಂದುಬಿಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಈ ಕೂಡಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಅಂಜಲಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಒಟ್ಟಿನಲ್ಲಿ ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಕ್ರೖೆಂ ರೇಟ್ ಹೆಚ್ಚಳವಾಗುತ್ತಿದೆ. ಅದರಲ್ಲೂ ಪ್ರೀತಿಯ ವಿಚಾರಕ್ಕೆ ಯುವತಿಯರ ಕೊಲೆ ಆಗುತ್ತಿರುವುದು ಹುಬ್ಬಳ್ಳಿಯ ಜನತೆಯನ್ನು ಆತಂಕಕ್ಕೆ ಎಡೆಮಾಡಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಸುವ ಮುನ್ನವೇ ಈ ಘಟನೆ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತ ಪ್ರಕರಣವಾಗಿದೆ. ಕೂಡಲೇ ತಪ್ಪಿತಸ್ಥರನ್ನು ಬಂದಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿರುವ ಪ್ರಲ್ಹಾದ ಜೋಶಿ, ಆಕೆಯ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಆ ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.