

ದೇವದುರ್ಗ: ಶಿಕ್ಷಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿದಾಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದರೊಂದಿಗೆ ಉತ್ತಮ ಫಲಿತಾಂಶ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ವೃತ್ತಿ ಗೌರವ ಕಾಪಾಡಿಕೊಳ್ಳಬೇಕು ಎಂದು ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ ಹೇಳಿದರು.
ಕೊಪ್ಪರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಿಗಾಗಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಶನಿವಾರ ಮಾತನಾಡಿದರು. ಶಿಕ್ಷಕರು ತಮ್ಮ ಕರ್ತವ್ಯ ನಿರ್ವಹಿಸಿದಾಗ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮಗೊಳಿಸಲು ಸಾಧ್ಯ. ಕಾರ್ಯಾಗಾರದಲ್ಲಿ ಚರ್ಚಿಸಿರುವ ವಿಷಯಗಳನ್ನು ತರಗತಿಯಲ್ಲಿ ಪ್ರಯೋಗಿಸಿ ಮಕ್ಕಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹೆಚ್ಚಿಸಬೇಕು. ಆ ಮೂಲಕ ವಿದ್ಯಾರ್ಥಿಗಳು ವಿಷಯದ ಬಗ್ಗೆ ಪರಿಪೂರ್ಣ ಜ್ಞಾನ ಪಡೆಯಲು ಸಾಧ್ಯವಾಗುತ್ತದೆ. ಆಗ ಫಲಿತಾಂಶವೂ ಉತ್ತಮಗೊಳ್ಳುತ್ತದೆ ಎಂದು ಹೇಳಿದರು.
ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಡಾ.ಮುನಿಯಪ್ಪ ನಾಗೋಲಿ ಮಾತನಾಡಿ, ಶಿಕ್ಷಕ ವೃತ್ತಿಯನ್ನು ನಿಷ್ಠೆ, ಪ್ರಾಮಾಣಿಕವಾಗಿ ನಿರ್ವಹಿಸಿದಾಗ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸಬೇಕಿದೆ ಎಂದರು. ಬಿಇಒ ಡಾ.ಆರ್.ಇಂದಿರಾ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ಭಾವಿಸಿ ವೈಯಕ್ತಿಕವಾಗಿ ಕಾಳಜಿ ನೀಡಿದಾಗ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.
ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ್ ಪೂಜಾರಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಹೆಬೂಬ್ ಅಲಿ, ಎಸ್‌ಡಿಎಂಸಿ ಅಧ್ಯಕ್ಷ ಶಿವರಾಜ್ ಕಲ್ಮನಿ, ಗ್ರಾಪಂ ಸದಸ್ಯ ಕಟ್ಟಾಚಾರ್ಯ ಅರ್ಚಕ, ಶಿಕ್ಷಣ ಸಂಯೋಜಕ ಸುರೇಶ್ ಪಾಟೀಲ್, ಮುಖ್ಯಶಿಕ್ಷಕ ರಮೇಶ್ ಕಟ್ಟಿಮನಿ, ಸಿದ್ದಪ್ಪ, ಮಲ್ಲಿಕಾರ್ಜುನ್ ಭುಜನ್ನವರ್ ಇತರರಿದ್ದರು.