

ದೇವದುರ್ಗ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ರೂಪಿಸಿದೆ. ಇದರಿಂದ ಗ್ರಾಮೀಣ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸಿಗಲಿದೆ ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.
ಅಮರಾಪುರ ಗ್ರಾಪಂ ಆವರಣದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು. ಈ ಕಾರ್ಯಕ್ರಮ ಕಂದಾಯ ಇಲಾಖೆಯ ಮಹತ್ವದ ಯೋಜನೆಯಾಗಿದೆ. ಜನರ ಮನೆ ಬಾಗಿಲಿಗೆ ಆಡಳಿತವನ್ನು ತರಲು ಸರ್ಕಾರ ಇಂಥ ದಿಟ್ಟ ತೀರ್ಮಾನ ಕೈಗೊಂಡಿದೆ. ಗ್ರಾಮಸ್ಥರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಅಧಿಕಾರಿಗಳು ಸ್ಪಂದಿಸಿ ಮುಂದಿನ ತಿಂಗಳು ನಡೆಯುವ ಇದೇ ಕಾರ್ಯಕ್ರಮದೊಳಗೆ ಪರಿಹಾರ ಕಲ್ಪಿಸಬೇಕು. ಅರ್ಜಿ ಸಲ್ಲಿಸಿದವರಿಗೆ ಪರಿಹಾರ ಸಿಗದಿದ್ದರೆ ನೇರವಾಗಿ ನನ್ನ ಬಳಿಗೆ ಬನ್ನಿ. ನಾನೇ ಪರಿಹಾರ ನೀಡುತ್ತೇನೆ. ಇಲ್ಲಿ ಪರಿಹಾರ ಸಿಗದಿದ್ದರೆ ಜನರು ನಿರಾಸೆಯಾಗಬೇಕಿಲ್ಲ ಎಂದು ಶಾಸಕ ಹೇಳಿದರು.
ತಹಸೀಲ್ದಾರ್ ಶ್ರೀನಿವಾಸ್ ಚಾಪೇಲ್ ಮಾತನಾಡಿ, ಜಿಲ್ಲಾಧಿಕಾರಿ ನಡೆ ಹಳ್ಳಿ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಆದೇಶ ಪ್ರತಿಯನ್ನು ಸ್ಥಳದಲ್ಲೇ ನೀಡಲಾಗಿದೆ. ಹಿರಿಯ ನಾಗರಿಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರಿಗೆ ಆದೇಶ ಪ್ರತಿ ನೀಡಲಾಗಿದೆ. ಸ್ಥಳದಲ್ಲಿ ಪರಿಹಾರ ಕಾಣದ ಅರ್ಜಿಗಳನ್ನು ಹಂತಹಂತವಾಗಿ ವಿಲೇವಾರಿ ಮಾಡಲಾಗುವುದು ಎಂದರು.