

de
ದೇವನಹಳ್ಳಿ: ತ್ಯಾಗ, ಬಲಿದಾನಗಳ ಪ್ರತಿಫಲದಿಂದ ಸಿಕ್ಕಿರುವ ಸ್ವಾತಂತ್ರ್ಯವನ್ನು ಶಾಶ್ವತವಾಗಿ ರಕ್ಷಿಸಿಕೊಳ್ಳಲು ನಾವೆಲ್ಲರೂ ಸಂಕಲ್ಪ ತೊಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಪಟ್ಟಣದ ಸರ್ಕಾರಿ ಕಿರಿಯ ಕಾಲೇಜಿನ ಆಟದ ಮೈದಾನದಲ್ಲಿ ಜಿಲ್ಲಾಡಳಿತ ಮತ್ತು ಜಿಪಂ ಆಯೋಜಿಸಿದ್ದ ಸ್ವಾತಂತ್ರೊ್ಯೕತ್ಸವದ ನಿಮಿತ್ತ ಏರ್ಪಾಡಾಗಿದ್ದ ಮ್ಯಾರಥಾನ್ ಓಟಕ್ಕೆ ಹಸಿರು ನಿಶಾನೆ ತೋರಿ, ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕರೊನಾ ಪಿಡುಗಿನ ನಡುವೆ ದೇಶಾದ್ಯಂತ ಸರಳವಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಬಲಿದಾನ ನೀಡಿದ ಎಲ್ಲ ಮಹನೀಯರನ್ನು ಸ್ಮರಿಸಬೇಕು ಎಂದರು.
ಕರೊನಾ 3ನೇ ಅಲೆ ಪ್ರಾರಂಭವಾಗುವ ಲಕ್ಷಣಗಳು ದಟ್ಟವಾಗುತ್ತಿವೆ. ಆದ್ದರಿಂದ, ಎಲ್ಲರೂ ಲಸಿಕೆ ಹಾಕಿಸಿಕೊಂಡು, ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. 10 ವರ್ಷದೊಳಗಿನ ಮಕ್ಕಳನ್ನು ಸುರಕ್ಷಿತವಾಗಿ ನೋಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಮ್ಯಾರಥಾನ್ ದೇವನಹಳ್ಳಿ ಪ್ರವಾಸಿ ಮಂದಿರದಿಂದ ಐತಿಹಾಸಿಕ ಕೋಟೆಯವರೆಗೆ ನಡೆಯಿತು. ಕಾಲೇಜು ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಮ್ಯಾರಥಾನ್ನಲ್ಲಿ ಪಾಲ್ಗೊಂಡಿದ್ದರು.
ಪುರಸಭೆಗೆ ಹೆಚ್ಚಿನ ಅನುದಾನ ಕೊಡಿ:
ತಾಲೂಕಿನ ಎರಡು ಪುರಸಭೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಲು ಜಿಲ್ಲಾ ಉಸ್ತುವಾರಿ ಸಚಿವರು ಸಹಕರಿಸಬೇಕು ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಮನವಿ ಮಾಡಿಕೊಂಡರು. ಹೆಚ್ಚಿನ ಅನುದಾನ ಬಂದಲ್ಲಿ ಎರಡೂ ಪಟ್ಟಣಗಳ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಆಕರ್ಷಕ ಪಥಸಂಚಲನ:
ರಾಷ್ಟ್ರ ಧ್ವಜಾರೋಹಣ ನೆರವೇರಿದ ಬಳಿಕ ಪೊಲೀಸ್ ಇಲಾಖೆಯ ವಿವಿಧ ತುಕುಡಿಗಳು ಮತ್ತಿತರರು ಆಕರ್ಷಕ ಪಥಸಂಚಲನ ನಡೆಸಿದರು. ಸಚಿವ ಎಂಟಿಬಿ ನಾಗರಾಜ್ ಗೌರವವಂದನೆ ಸ್ವೀಕರಿಸಿದರು.
ಕೋವಿಡ್ ವಾರಿಯರ್ಸ್ಗೆ ಸನ್ಮಾನ:
ಕರೊನಾ ಪಿಡುಗಿನ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ವಾರಿಯರ್ಸ್ ಎನಿಸಿದ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಚಿವ ಎಂಟಿಬಿ ನಾಗರಾಜ್, ಶಾಸಕ ನಿಸರ್ಗ ನಾರಾಯಣಸ್ವಾಮಿ ಸನ್ಮಾನಿಸಿದರು.
ಕೆಐಎಎಲ್ ಪ್ರದೇಶಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಪಂ ಸಿಇಒ ಎಂ.ಆರ್.ರವಿಕುಮಾರ್, ಎಡಿಸಿ ವಿಜಯಾ ಇ. ರವಿಕುಮಾರ್, ದೇವನಹಳ್ಳಿ ತಹಸೀಲ್ದಾರ್ ಅನಿಲ್ಕುಮಾರ್ ಅರೋಳಿಕರ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭವ್ಯಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಪುರಸಭೆ ಅಧ್ಯಕ್ಷೆ ಜಿ. ರೇಖಾ, ಮುಖ್ಯಾಧಿಕಾರಿ ಎ.ಎಚ್. ನಾಗರಾಜ್ ಮತ್ತಿತರರಿದ್ದರು.