ಆ.20ರಂದು ಡಿ.ದೇವರಾಜ ಅರಸು ಜನ್ಮದಿನ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

Devaraja Arasu birthday pre-meeting Mandya
Published on

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನವನ್ನು ಆ.20ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಡಿ.ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಿಂದ ಚಾಲನೆ ನೀಡಲಾಗುವುದು. ಪೂರ್ಣ ಕುಂಭ ಹೊತ್ತ ಮಹಿಳೆಯರು, ಕಲಾ ತಂಡಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಮೆರವಣಿಗೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯುವಂತೆ ವ್ಯವಸ್ಥೆ ಮಾಡಿ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 11ಗಂಟೆಗೆ ವೇದಿಕೆ ಕಾರ್ಯಕ್ರಮವಿರಲಿದೆ. ಆದ್ದರಿಂದ ತಳಿರು ತೋರಣ ಹಾಗೂ ಅಲಂಕಾರಿಕ ಹೂ ಕುಂಡಗಳಿಂದ ವೇದಿಕೆಯನ್ನು ಅಲಂಕರಿಸಿ. ಉಪನ್ಯಾಸಕ್ಕೆ ನುರಿತ ವ್ಯಕ್ತಿಯನ್ನು ಆಯ್ಕೆ ಮಾಡಿ. ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿ. ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾಗಿರುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಎಂದರು.

ದೇವರಾಜ ಅರಸು ಅವರ ಸಾಧನೆಗಳ ಕುರಿತು ಅನೇಕ ಪುಸ್ತಕಗಳಿವೆ. ಅವುಗಳ ಅನಾವರಣ ಹಾಗೂ ಮಾರಾಟ ಮಳಿಗೆಯನ್ನು ಕಾರ್ಯಕ್ರದ ದಿನ ತೆರೆಯಿರಿ. ಅರಸು ಅವರ ಜೀವನ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿ. ಒಟ್ಟಾರೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಬಹಳ ವ್ಯವಸ್ಥಿತವಾಗಿ ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಆರೋಗ್ಯ ಇಲಾಖೆ ವತಿಯಿಂದ ಡೆಂೆ ತಡೆಗಟ್ಟಲು ಅನುಸರಿಸಬೇಕಿರುವ ಕ್ರಮಗಳ ಬಗ್ಗೆ ಮೆರವಣಿಗೆಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಕೃಷ್ಣಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ.ಸಿದ್ದಲಿಂಗೇಶ್, ಜಿಪಂ ಉಪ ಕಾರ್ಯದರ್ಶಿ ಬಾಬು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net