ದೇವರಾಜ ಅರಸು ಆಡಳಿತ ದೂರದೃಷ್ಟಿಗೆ ಹಿಡಿದ ಕೈಗನ್ನಡಿ

udp-20-arasu 1
Published on

ಉಡುಪಿ: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಆಡಳಿತ ಅವಧಿಯಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಬಡವರ ಹಾಗೂ ದೀನ ದಲಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಮುಂದುವರೆಯುತ್ತಿರುವುದು ಅವರ ದೂರದೃಷ್ಟಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು.

ಮಿಷನ್​ ಕಂಪೌಂಡ್​ನ ಬಳಿಯ ಬಡಗಬೆಟ್ಟು ಕ್ರೆಡಿಟ್​ ಕೋ-ಆಪರೇಟಿವ್​ ಸೊಸೈಟಿ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 110ನೇ ಜನ್ಮದಿನಾಚರಣೆ ಉದ್ಘಾಟಿಸಿ, ಮಾತನಾಡಿದರು.

ಅರಸು ಅವರು ಉಳುವವನೇ ಹೊಲದೊಡೆಯ ಕಾರ್ಯಕ್ರಮದ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸಮ ಸಮಾಜ ನಿಮಾರ್ಣದ ರೂವಾರಿಯಾಗಿ ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಉಪ ಪೊಲೀಸ್​ ಅಧೀಕ್ಷಕ ಡಿ.ಟಿ ಪ್ರಭು ಉಪನ್ಯಾಸ ನೀಡಿ, ದಮನಿತರ ಅಭಿವೃದ್ಧಿಗೆ ಶ್ರಮಿಸಿದ ಶ್ರೀಮಂತ ವ್ಯಕ್ತಿತ್ವ ಅರಸು ಅವರದ್ದಾಗಿದೆ. ಉಳುವವನೆ ಒಡೆಯ, ಜೀತ ಪದ್ಧತಿ ನಿಮೂರ್ಲನೆ ಕಾರ್ಯಕ್ರಮದ ಮೂಲಕ ರೈತರ ಹಾಗೂ ಬಡಜನರ ಬದುಕಿಗೆ ಆಶಾಕಿರಣವಾಗಿ, ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಅಗಮಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಮೂಲಭೂತ ಸೌಕರ್ಯ ಸೇರಿದಂತೆ ಹಾಸ್ಟೆಲ್​ಗಳ ನಿಮಾರ್ಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಮ ಸಮಾಜ ನಿಮಾರ್ಣ ಮಾಡುವಲ್ಲಿ ದಿಟ್ಟ ಹೆಜ್ಜೆ ಇಟ್ಟವರಲ್ಲಿ ದೇವರಾಜ ಅರಸು ಕೂಡ ಪ್ರಮುಖರು. ವಿದ್ಯಾರ್ಥಿಗಳು ತಮಗೆ ದೊರಕುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಮುಂದಿನ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು. ಸಮಾಜದಲ್ಲಿ ಸಮಾನತೆ ತರುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿದರು.

ಇದೇ ಸಂದರ್ಭದಲ್ಲಿ 2024&-25 ನೇ ಸಾಲಿನಲ್ಲಿ ಎಸ್​.ಎಸ್​.ಎಲ್​.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್​ಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಸ್​.ಎಸ್​ ಖಾದರಳ್ಳಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್​ ಬಿ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಅಂಬೇಡ್ಕರ್​ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಶಂಕರ್​ ಮತ್ತಿತರರು ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್​. ಲಮಾಣಿ ಸ್ವಾಗತಿಸಿ, ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಕಾಂತ್​ ಜಿ. ಗುನಗಾ ನಿರೂಪಿಸಿದರು. ಇಲಾಖೆಯ ಲೆಕ್ಕ ಅಧೀಕ್ಷಕಿ ಸುಗುಣ ಎ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net