

ಉಡುಪಿ: ಹಿಂದುಳಿದ ವರ್ಗಗಳ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಆಗಸ್ಟ್ 20 ರಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಗಸ್ಟ್ 31 ರಂದು ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು.
ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿ.ದೇವರಾಜು ಅರಸು ಜಯಂತಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.
ಡಿ.ದೇವರಾಜು ಅರಸು ಅವರ ಜೀವನ, ಸಾಧನೆ ಕುರಿತಂತೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿ, ಬಹುಮಾನ ವಿತರಿಸುವಂತೆ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುವಂತೆ ನಿರ್ದೇಶನ ನೀಡಿದರು.
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಿನ್ನೆಲೆಯಲ್ಲಿ ಗೀತ ಗಾಯನ ಕಾರ್ಯಕ್ರಮ ಆಯೋಜಿಸಿ, ನಾರಾಯಣ ಗುರುಗಳ ಜೀವನ, ತತ್ವ, ಆದರ್ಶಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುವಂತೆ ನಿರ್ದೇಶನ ನೀಡಿದರು.
ಬ್ರಹ್ಮಶ್ರೀ ನಾರಾಯಣ ಗುರು ಸಂದೇಶಗಳನ್ನು ಯುವ ಜನತೆಗೆ ತಿಳಿಸುವ ಉದ್ದೇಶದಿಂದ ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿ ಬಹುಮಾನ ವಿತರಿಸುವಂತೆ ತಿಳಿಸಿದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಬ್ರಹಶ್ರೀ ನಾರಾಯಣ ಗುರುಗಳು ಯಾವುದೇ ರ್ನಿದಿಷ್ಟ ಧರ್ಮ, ವರ್ಗಕ್ಕೆ ಸೀಮಿತರಾಗದೇ ಇಡೀ ಮಾನವ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ಜಯಂತಿಯನ್ನು ಮಾದರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕಿದ್ದು, ಇದಕ್ಕೆ ವಿವಿಧ ಸಮುದಾಯಗಳ ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಲಮಾಣಿ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.