

ದೇವದುರ್ಗ: ಸುಸಂಸ್ಕೃತ ಸಮಾಜಕ್ಕೆ ಸ್ವಾಲಂಬನೆ ಜೀವನ ಅಗತ್ಯ. ಈ ನಿಟ್ಟಿನಲ್ಲಿ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರಮ ಮಹಾತ್ವದ್ದಾಗಿದೆ ಎಂದು ಜ್ಞಾನ ವಿಕಾಸ ಕಾರ್ಯಕ್ರಮದ ಯೋಜನಾಧಿಕಾರಿ ಸುಧಾ ಗಾಂವಕರ್ ಹೇಳಿದರು.
ಪಟ್ಟಣದಲ್ಲಿ ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದು ಹೆಣ್ಣು ಮಕ್ಕಳು ಆತ್ಮವಿಶ್ವಾಸದಿಂದ ಬದುಕು ರೂಪಿಸಿಕೊಳ್ಳುತ್ತಿದ್ದಾರೆ. ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಗ್ರಾಮಾಭಿವೃದ್ಧಿ ಯೋಜನೆ ನೀಡುವ ಆರ್ಥಿಕ ನೆರವನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದರು.
ಯೋಜನಾಧಿಕಾರಿ ರಾಜೇಶ್ ಮಾತನಾಡಿ, ಮಹಿಳೆಯರಲ್ಲಿ ಉಳಿತಾಯ ಮನೋಭಾವನೆ, ಕುಟುಂಬ ನಿರ್ವಹಣೆ, ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ ಹಾಗೂ ವಿವಿಧ ವಿಭಾಗಗಳಲ್ಲಿ ಮಹಿಳೆಯರಿಗೆ ಅಗತ್ಯ ಕಾರ್ಯಕ್ರಮ ರೂಪಿಸಲಾಗಿದೆ. ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಯೆ ಯೋಜನೆಯ ಗುರಿಯಾಗಿದೆ ಎಂದು ತಿಳಿಸಿದರು. ಉದ್ಯಮಿ ಭಾನುಪ್ರಕಾಶ ಖೇಣೇದ್, ಪ್ರಮುಖರಾದ ಸತೀಶ್ ಬಳೆ, ಸಿದ್ದಪ್ಪ ಪೂಜಾರಿ, ಗುರುಲಿಂಗಮ್ಮ ಇತರರಿದ್ದರು.