

ಮಳವಳ್ಳಿ : ಕನ್ನಡ ನಾಡು, ನುಡಿಯ ರಕ್ಷಣೆಯ ಜತೆಗೆ ನಾಡಿನ ಪರಿಸರ ಸಂರಕ್ಷಣೆಯ ಅಭಿಮಾನವನ್ನು ಎಲ್ಲರೂ ಬೆಳೆಸಿಕೊಳ್ಳಬೇಕೆಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಮಣ್ಣಿನ ಭಾಷೆ ಹಾಗೂ ನೆಲ, ಜಲವೂ ಸೇರಿದಂತೆ ಪರಿಸರ ರಕ್ಷಣೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಇಡೀ ರಾಜ್ಯದ್ಯಲ್ಲೇ ಹೆಚ್ಚು ಕನ್ನಡ ಭಾಷೆಯನ್ನು ಬಳಕೆ ಮಾಡುವ ಏಕೈಕ ಜಿಲ್ಲೆ ನಮ್ಮದಾಗಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ. ಕಾವೇರಿ ಮಡಿಲ ಮಕ್ಕಳಾಗಿರುವುದೂ ನಮ್ಮೆಲ್ಲರ ಪುಣ್ಯ ಎಂದರು.
ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಖಾಸಗಿ ಕಂಪನಿಗಳ ಸಿಎಸ್‌ಆರ್ ಅನುದಾನ ಬಳಸಿಕೊಂಡು ಶಾಲಾ ಕೊಠಡಿ ನಿರ್ಮಾಣ ಸೇರಿದಂತೆ ನವೀಕರಣಕ್ಕೆ ಕ್ರಮ ವಹಿಸಲಾಗುತ್ತಿದೆ. ಅಲ್ಲದೇ ತಂತ್ರಜ್ಞಾನ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದಪಡಿಸಿ ಉತ್ತಮ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತಯಾರಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು.
ಇದಕ್ಕೂ ಮುನ್ನಾ ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷರೂ ಆಗಿರುವ ತಹಸೀಲ್ದಾರ್ ಡಾ.ಲೋಕೇಶ್ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡಿದರು.
ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವವರನ್ನು ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ಕಸಾಪ ಅಧ್ಯಕ್ಷ ಚೇತನ್ ಕುಮಾರ್, ಮುಖಂಡರಾದ ಚಿಕ್ಕಲಿಂಗಯ್ಯ, ಮಹದೇವು, ದೊಡ್ಡಯ್ಯ, ತಾಪಂ ಇಒ ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನಾಡಿವೈಎಸ್‌ಪಿ ಯಶವಂತ್ ಕುಮಾರ್ ಸೇರಿದಂತೆ ಇತರರಿದ್ದರು.
ವಿವಿಧೆಡೆಗಳಲ್ಲಿ ಧ್ವಜಾರೋಹಣ: ಪಟ್ಟಣದ ಸೇರಿದಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಲೂಕಿನ ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕಿನ ಎಲ್ಲ್ಲ 39 ಗ್ರಾಮ ಪಂಚಾಯಿತಿ ಕಾರ್ಯಾಲಯಗಳು ಹಾಗೂ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲೂ ಧ್ವಜಾರೋಹಣ ನಡೆಸಿ ಗೌರವ ವಂದನೆ ಸಲ್ಲಿಸಲಾಯಿತು.