

ಶಿಡ್ಲಘಟ್ಟ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಕ್ಷೇತ್ರದ ಅಭಿವೃದ್ದಿ ಸಾಧ್ಯ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.
ನಗರದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಕ್ಷೇತ್ರ ಇದಾಗಿದೆ. ತಮ್ಮ ಅಧಿಕಾರವಧಿಯಲ್ಲಿ ಕ್ಷೇತ್ರದ ಸಮಸ್ತ ಅಭಿವೃದ್ಧಿ ಮಾಡಬೇಕೆಂಬ ಆಸೆ ಹೊಂದಿದ್ದೇನೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳು ಸಹಕರಿಸಬೇಕು. ಸರ್ಕಾರದ ಯೋಜನೆ ಸೇರಿ ವಿವಿಧ ಅನುಧಾನಗಳು ನೇರವಾಗಿ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರು.
ತಾಲೂಕಿನ ಗ್ರಾಮೀಣ ಭಾಗದ ರಸ್ತೆ ಕಾಮಗಾರಿ ಮಾಡಲು ಸಂಬಂಧಪಟ್ಟ ಇಲಾಖೆ ಯೋಜನೆ ರೂಪಿಸಬೇಕು. ವಿನಾಕಾರಣ ಅರಣ್ಯ ಇಲಾಖೆ ಸಿಬ್ಬಂದಿ ರೈತರಿಗೆ ತೊಂದರೆ ಕೊಡಬಾರದು. ರೇಷ್ಮೆ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಶಿಡ್ಲಘಟ್ಟ ರೇಷ್ಮೆಗೂಡು ಮಾರುಕಟ್ಟೆಗೆ ಇತ್ತೀಚೆಗೆ ರೇಷ್ಮೆಗೂಡು ಆವಕ ಕಡಿಮೆಯಾಗುತ್ತಿದ್ದು, ಹೆಚ್ಚು ರೇಷ್ಮೆಗೂಡು ಬರುವಂತೆ ಮಾಡಲು ಅಧಿಕಾರಿಗಳು ಗಮನಹರಿಸಬೇಕು ಎಂದರು.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕು ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಸಕ ರವಿಕುಮಾರ್ ಕಿವಿಮಾತು ಹೇಳಿದರು.
ತಾಲೂಕಿನ 32 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಜರುಗಿಸಬೇಕು. ಅಲ್ಲದೇ ವಿದ್ಯುತ್ ದೀಪಗಳ ಸಮಸ್ಯೆಯೂ ಹೆಚ್ಚಾಗಿದ್ದು, ಪೌರಾಯುಕ್ತರು ನಿರ್ಲಕ್ಷ್ಯ ತೋರದೆ ನಗರಸಭೆ ಅನುದಾನಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಸಮಸ್ಯೆ ಬಗೆಹರಿಸಬೇಕು ಎಂದರು.
ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳಿಂದ ಶಾಸಕರು ಮಾಹಿತಿ ಪಡೆದರು.ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಇಲಾಖೆಗಳಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳುವಾಗ ಸ್ಥಳೀಯ ವಿದ್ಯಾವಂತರಿಗೆ ಆದ್ಯತೆ ನೀಡಬೇಕು ಎಂದರು.
ವಿವಿಧ ಇಲಾಖೆಗಳ ವರದಿ ಪರಿಶೀಲಿಸಿ, ಶೀಘ್ರವಾಗಿ ತೊಂದರೆಯಾಗಿರುವ ವಲಯದಲ್ಲಿ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ತಾಪಂ ಇಒ ಆರ್.ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ. ನರೇಂದ್ರಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ, ಆರಕ್ಷಕ ವೃತ್ತ ನಿರೀಕ್ಷಕ ಎಂ.ಶ್ರೀನಿವಾಸ್, ಕೃಷಿ ಸಹಾಯಕ ನಿದೇಶಕ ಪಿ.ಆರ್.ರವಿ, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ಸೇರಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.