

ಚನ್ನಮ್ಮನ ಕಿತ್ತೂರು: ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಮಾಡುವ ವ್ಯಕ್ತಿಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಶಾಸಕ ಬಾಬಾಸಾಹೇಬ ಪಾಟೀಲ ಅಧಿಕಾರಿಗಳಿಗೆ ಸಲಹೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಸುಗಮ ಸಂಚಾರಕ್ಕಾಗಿ ರಸ್ತೆ ನವೀಕರಣ ಹಾಗೂ ನಿರ್ಮಾಣ ಕಾಮಗಾರಿಗಳಿಗೆ ಅಡ್ಡಿ ಮಾಡುವವರ ಮೇಲೆ ಮುಲಾಜಿಲ್ಲದೆ ಕ್ರಮಕ್ಕೆ ಮುಂದಾಗಬೇಕೆಂದು ತಿಳಿಸಿದರು.
ಜಲಜೀವನ ಯೋಜನೆಯಡಿ ಗ್ರಾಮಗಳಲ್ಲಿ ಪೈಪ್ಲೈನ್ ಕಾಮಗಾರಿಗಾಗಿ ಅಗೆದಿರುವ ರಸ್ತೆ, ಇತರ ಸ್ಥಳಗಳನ್ನು ಗುತ್ತಿಗೆದಾರರು ಕಡ್ಡಾಯವಾಗಿ ಸರಿಪಡಿಸಿಕೊಡುವ ಮುನ್ನ ಗ್ರಾಪಂ ಅಭಿವದ್ಧಿ ಅಧಿಕಾರಿಗಳು ಹಸ್ತಾಂತರ ಮಾಡಿಕೊಳ್ಳುವಂತಿಲ್ಲ. ಸದಸ್ಯರ ಗಮನಕ್ಕೆ ತರದೆ ಕೆಲವೆಡೆ ಹಸ್ತಾಂತರ ನಡೆದಿದ್ದು, ಮುಂದೆ ಈ ತಪ್ಪು ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ತಹಸೀಲ್ದಾರ್ ಕಲಗೌಡ ಪಾಟೀಲ ಮಾತನಾಡಿ, ಎಂಟು ದಿನಗಳಲ್ಲಿ ತಾಲೂಕು ಆಡಳಿತಸೌಧದಲ್ಲಿ ಎಲ್ಲ ಇಲಾಖೆಗಳು ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಕಾರ್ಯನಿರ್ವಹಿಸುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ನಿಂಗಪ್ಪ ಮಸಳಿ, ಪಿಎಸ್ಐ ಪ್ರವಿಣ ಗಂಗೋಳ, ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲೂಕಾಧ್ಯ ಗಂಗಪ್ಪ ಹುರಕಡ್ಲಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿದ್ದರು.