

ಜಗಳೂರು: ತಾಲೂಕು ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ರಾಜ್ಯ ಬಜೆಟ್ನಲ್ಲಿ ಸೇರುವ ನಿರೀಕ್ಷೆ ಇದೆ ಎಂದು ಶಾಸಕ ಬಿ. ದೇವೇಂದ್ರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಬಸವನಕೋಟೆಯಲ್ಲಿ ಶನಿವಾರ ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಂಬೇಡ್ಕರ್ ಪುತ್ಥಳಿಯಿಂದ ಪ್ರೌಢ ಶಾಲೆಯವರೆಗೂ 1ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ತಾಲೂಕಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಶಿಥಿಲಗೊಂಡಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಹೊಸ ಆಸ್ಪತ್ರೆಗೆ ಅನುದಾನ ಕೊಡಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಪಟ್ಟಣದ ಹೊರವಲಯ ಮರೇನಹಳ್ಳಿ ರಸ್ತೆಯಲ್ಲಿ 5 ಎಕರೆ ಜಾಗ ಗುರುತಿಸಲಾಗಿದೆ ಎಂದರು.
ಗ್ರಾಮಗಳಲ್ಲಿ ಮೂಲ ಸೌಕರ್ಯಗಳಾದ ಸಿಸಿ ರಸ್ತೆ, ಚರಂಡಿ, ಕುಡಿಯುವ ನೀರು, ಬೆಳಕು ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 1.83 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಾರ್ಚ್ 3 ರಿಂದ ಅಧಿವೇಶನ ಆರಂಭವಾಗಲಿದ್ದು, ತಾಲೂಕಿಗೆ ಬೇಕಾದ ಮೂಲ ಸೌಕರ್ಯಗಳ ಬಗ್ಗೆ ಸರ್ಕಾರದೊಂದಿಗೆ ಮಾತನಾಡಿ, ವಿವಿಧ ಇಲಾಖೆಗೆ ಹಂತ- ಹಂತವಾಗಿ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ತಾಲೂಕಿನಲ್ಲಿ ಹೊಸಕೆರೆ ಸತ್ಯಮ್ಮ ದೇವಸ್ಥಾನದವರೆಗೆ 20ಲಕ್ಷ ರೂ. ವೆಚ್ಚದಲ್ಲಿ ಸಿಸಿರಸ್ತೆ ಮತ್ತು ಚರಂಡಿ, ಮಲೆಮಾಚಿಕೆರೆ ಗ್ರಾಮದ ಸರ್ಕಾರಿ ಶಾಲೆ ಹಿಂಭಾಗದ ಮುಖ್ಯರಸ್ತೆಗೆ 20 ಲಕ್ಷ ರೂ. ಸಿಸಿ ಚರಂಡಿ, ಸೊಕ್ಕೆ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ ಅಂದಾಜು 1.83 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಲನಿಗಳಲ್ಲಿ ಚರಂಡಿ, ಮಾಗಡಿಯಲ್ಲಿ 50 ಲಕ್ಷ ರೂ.ಗಳಲ್ಲಿ ಸಿಸಿ ರಸ್ತೆ, ಬಸವನಕೋಟೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಸೇರಿ ಒಟ್ಟು 4 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.
ಗ್ರಾಪಂ ಅಧ್ಯಕ್ಷೆ ಮರಿಯಮ್ಮ ದಂಡೆಪ್ಪ, ದೊಣೆಹಳ್ಳಿ ಗ್ರಾಪಂ ಅಧ್ಯಕ್ಷ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮದ್, ವಿಎಸ್ಎಸ್ಎನ್ ಅಧ್ಯಕ್ಷ ಚನ್ನಬಸಪ್ಪ, ಕೆಪಿಸಿಸಿ ಎಸ್ಟಿ ವಿಭಾಗದ ರಾಜ್ಯ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್, ಜಿಪಂ ಎಇಇ ಶಿವಮೂರ್ತಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಮಹಿಳಾ ಘಟಕದ ಕಾರ್ಯದರ್ಶಿ ಸ್ನೇಹಾ, ಎಸ್ಸಿ ಮಹಿಳಾ ಘಟಕದ ಉಪಾಧ್ಯಕ್ಷೆ ಶಿಲ್ಪಾ, ನಿವೃತ್ತ ಸಮಾಜ ಕಲ್ಯಾಣಾಧಿಕಾರಿ ಮಹೇಶ್ವರಪ್ಪ, ತಾಪಂ ಮಾಜಿ ಅಧ್ಯಕ್ಷ ಸಣ್ಣಸೂರಯ್ಯ, ನಿವೃತ್ತ ನೌಕರ ಮಂಜುನಾಥ್, ಗುತ್ತಿಗೆದಾರ ದೀಪಕ್ ಪಟೇಲ್, ಮುಖಂಡರಾದ ಹರೀಶ್, ಗುರುಸಿದ್ದನಗೌಡ, ಮಧು, ರವಿಕುಮಾರ್, ಗುತ್ತಿದುರ್ಗ ರುದ್ರೇಶ್ ಮತ್ತಿತರರಿದ್ದರು.
ಎರಡು ಕೆರೆಗಳು ಬಾಕಿ: 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಬಹುತೇಕ ಕೆರೆಗಳಿಗೆ ನೀರು ತುಂಬಿಸಲಾಗಿದ್ದು, ಗುರುಸಿದ್ದಾಪುರ ಮತ್ತು ಮಾಗಡಿ ಗ್ರಾಮದ ಕೆರೆಗಳಿಗೆ ಕಾನೂನು ತೊಡಕಿನಿಂದ ಕಾಮಗಾರಿ ವಿಳಂಬವಾಗಿದೆ. ಈ ಭಾಗದಲ್ಲಿ ಅರಣ್ಯ ಇಲಾಖೆಯ ಅನುಮತಿ ಇಲ್ಲದ ಕಾರಣ ಪೈಪ್ ಕಾಮಗಾರಿ ಸ್ಥಗಿತಗೊಂಡಿದೆ. ಅರಣ್ಯ ಇಲಾಖೆ ಸಚಿವರೊಂದಿಗೆ ಮಾತನಾಡಿ ಆದಷ್ಟು ಬೇಗ ಸಮಸ್ಯೆ ಪರಿಹರಿಸಿ ನೀರು ತುಂಬಿಸಲಾಗುವುದು ಎಂದು ಶಾಸಕ ಬಿ. ದೇವೇಂದ್ರಪ್ಪ ಭರವಸೆ ನೀಡಿದರು.
ಬಸ್ ಡಿಪೋ ಅವಶ್ಯಕ: ಪಟ್ಟಣದಲ್ಲಿ ಕೆಎಸ್ಆರ್ಟಿಸಿ ಡಿಪೋ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಂಘಟನೆ ಸೇರಿ ವಿವಿಧ ಸಂಘಟನೆಗಳು ದಾವಣಗೆರೆಯವರೆಗೂ ಪಾದಯಾತ್ರೆ ನಡೆಸಿ ರಾಜ್ಯದ ಗಮನ ಸೆಳೆದಿದ್ದಾರೆ. ಹಾಗಾಗಿ ಸಾರಿಗೆ ಸಚಿವರ ಗಮನಕ್ಕೆ ತಂದು ಡಿಪೋಗೆ ಒತ್ತಾಯ ಮಾಡಿ ಅನುಮೋದನೆ ಪಡೆಯಲಾಗುವುದು. ಇದರಿಂದ ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದಂತಾಗುತ್ತದೆ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.