ಸಮಗ್ರ ಸಮೀಕ್ಷೆ ಮೂಲಕ ವಿಕಲಚೇತನರಿಗೆ ಸೌಲಭ್ಯ ಮಂಜೂರು: ಸಚಿವೆ ಶೋಭಾ ಕರಂದ್ಲಾಜೆ

udp-25-shobha
Published on

ಉಡುಪಿ: ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ , ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ನಿಖರ ಅಂಕಿಗಳು ಇಲ್ಲವಾದ್ದರಿಂದ ಪ್ರತೀ ಬಾರಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಸಾಧನ ಸಲಕರಣಗಳನ್ನು ವಿತರಿಸಲಾಗುತ್ತಿದ್ದು, ಜಿಲ್ಲೆಯಲ್ಲಿನ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತ ರೀತಿಯಲ್ಲಿ ಸಮಗ್ರ ಸಮೀಕ್ಷೆ ನಡೆಸಿ, ನಿಖರ ಸಂಖ್ಯೆ ಮತ್ತು ಅವರಿಗೆ ಅಗತ್ಯವಿರುವ ಉಪಕರಣಗಳ ಬೇಡಿಕೆ ಸಲ್ಲಿಸಿದ್ದಲ್ಲಿ ಎಲ್ಲರಿಗೂ ಕೇಂದ್ರ ಸರ್ಕಾರದ ಮೂಲಕ ಅಗತ್ಯ ಸಾಧನ ಸಲಕರಣಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು, ಇದಕ್ಕಾಗಿ ಕೇಂದ್ರದಲ್ಲಿ ಅನುದಾನದ ಯಾವುದೇ ಕೊರತೆ ಇಲ್ಲ ಎಂದರು.

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾಜಿಕ ನ್ಯಾಯದ ಅಡಿಯಲ್ಲಿ, ಪ್ರತಿಯೊಬ್ಬ ನಾಗರೀಕರಿಗೂ ಅನುಕೂಲವಾಗುವಂತೆ ಸಾಮಾಜಿಕ ಕಳಕಳಿಯಿಂದ ಪ್ರತಿವರ್ಷ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತವೆ. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ, ವಿಕಲಚೇತನರು ಮತ್ತು ಹಿರಿಯ ನಾಗರೀಕರು ಸೇರಿದಂತೆ ಪ್ರತಿಯೊಬ್ಬರಿಗೂ ಈ ಯೋಜನೆಗಳನ್ನು ಅವರ ಮನೆಯ ಬಾಗಿಲಿಗೆ ತಲಪಿಸುವ ಕೆಲಸ ಮಾಡಬೇಕು ಎಂದರು.
ರಾಜ್ಯದಲ್ಲಿರುವ ವಿಕಲಚೇತನರಲ್ಲಿ ೬೮೦೦ ಜನರಿಗೆ ವಿವಿಧ ದೈನಂದಿನ ಚಟುವಟಿಕೆಗಳನ್ನು ಕೈಗೊಳ್ಳಲು ವಾಹನಗಳ ಅವಶ್ಯಕತೆಯಿದ್ದು, ಈ ವರ್ಷ ಮೊದಲ ಹಂತದಲ್ಲಿ ೩೦೦೦ ಜನರಿಗೆ ೩೦ ಕೋಟಿ ವೆಚ್ಚದಲ್ಲಿ ವಾಹನಗಳನ್ನು ವಿತರಿಸಲಾಗುವುದು. ಉಳಿದವರಿಗೆ ಮುಂದಿನ ವರ್ಷ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ೪೯೫ ಫಲಾನುಭವಿಗಳಿಗೆ, ೪೮.೫೦ ಲಕ್ಷ ರೂ ಮೊತ್ತದ ೨೪೯೬ ವಿವಿಧ ಸಾಧನ ಪರಿಕರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿ.ಪಂ. ಸಿಇಒ ಪ್ರಸನ್ನ ಹೆಚ್,ಅಪರ ಜಿಲ್ಲಾಧಿಕಾರಿ ಮಮತಾ ದೇವಿ , ಕುಂದಾಪುರ ಉಪ ವಿಬಾಗಾಧಿಕಾರಿ ರಶ್ಮಿ, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಗಿರಿರಾಜ್ ಪ್ರಸಾದ್ ಮೀನಾ , ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕಿ ಶ್ಯಾಮಲಾ, ಜಿಲ್ಲಾ ನಿರೂಪಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ವಿಕಲ ಚೇತನರ ಕಲ್ಯಾಣಾಧಿಕಾರಿ ರಾಮದಾಸ್ ಮತ್ತಿತರರು ಇದ್ದರು. ಅಲಿಂಕೋ ಸಂಸ್ಥೆಯ ಅಶೋಕ್ ಪಾಲ್ ಸ್ವಾಗತಿಸಿದರು, ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ವಿವೇಕಾನಂದ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net