ಕೆಎಂಎಫ್ ನಿರ್ದೇಶಕರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ

mng-20may-deviprasad shetty
Published on


ಮಂಗಳೂರು : ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಬೆಂಗಳೂರು ಇದರ ನಿರ್ದೇಶಕರಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಆಯ್ಕೆಯಾಗಿದ್ದಾರೆ.
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರನ್ನು ಮಂಗಳವಾರ ನಡೆದ ಒಕ್ಕೂಟದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ಕೆಎಂಎಫ್ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಯಿತು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಶಿಫಾರಸಿನ ಮೇರೆಗೆ ಈ ಆಯ್ಕೆ ನಡೆದಿದೆ.
ಇತ್ತೀಚೆಗೆ ನಡೆದ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದ ಹೈನುಗಾರರ ಬಳಗದ 13 ಮಂದಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಬಳಿಕ ಈ ಬಳಗದ ರವಿರಾಜ ಹೆಗ್ಡೆ ಅಧ್ಯಕ್ಷರಾಗಿ ಹಾಗೂ ಉದಯ ಎಸ್. ಕೋಟ್ಯಾನ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದರು. ಈಗ ದೇವಿಪ್ರಸಾದ್ ಶೆಟ್ಟಿ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಬೆಳಪು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net