ಗೃಹಲಕ್ಷ್ಮೀ ಅನುಷ್ಠಾನಕ್ಕೆ ಮುತುವರ್ಜಿ ಅಗತ್ಯ

devnalli dc meeting
Published on

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅನಿಸಿಕೆ

ಅರ್ಹರಿಗೆ ಸೌಲಭ್ಯ ತಲುಪಿಸಲು ಸೂಚನೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಆ.27ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರಲಿದೆ. ಹಾಗೆಯೇ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳು, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಯೋಜನೆ ಸಾಕಾರಕ್ಕೆ ಬೇಕಾದ ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಧಿಕಾರಿಗಳು ಲಾನುಭವಿಗಳನ್ನು ಆಯ್ಕೆ ಮಾಡಿ ಯೋಜನೆ ತಲುಪುವಂತೆ ಮಾಡಬೇಕು ಎಂದರು.
ಸೌಜನ್ಯದಿಂದ ವರ್ತಿಸಿ ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ನೇರ ನಗದು ಸೌಲಭ್ಯವನ್ನು ಅವರ ಖಾತೆಗಳಿಗೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಏಕಕಾಲದಲ್ಲಿ ಯೋಜನೆ ಜಾರಿಯಾಗುತ್ತಿರುವುದರಿಂದ ಆರಂಭದಲ್ಲಿ ಕೆವೊಂದು ತಾಂತ್ರಿಕ ದೋಷ ಎದುರಾಗಬಹುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರ ಜತೆಗೆ ಸೌಜನ್ಯದಿಂದ ವರ್ತಿಸುವ ಮೂಲಕ ಅರ್ಹರಿಗೆ ಯೋಜನೆ ತಲುಪುವಂತೆ ಕ್ರಮಕೈಗೊಳ್ಳಬೇಕು ಎಂದು ಶಿವಶಂಕರ್ ಹೇಳಿದರು.
ಮುಂಗಡ ಕಾಯ್ದಿರಿಸಿ: ಗೃಹಲಕ್ಷ್ಮೀ ಯೋಜನೆ ರಾಜ್ಯಮಟ್ಟದ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಆಯೋಜಿಸಿದ್ದು, ಇದರ ವೀಕ್ಷಣೆಗೆ ಪ್ರತಿ ಕಾರ್ಯಕ್ರಮದಲ್ಲಿ ಒಂದು ಟಿವಿ ಹಾಗೂ 10*10 ಅಳತೆಯ ಎಲ್ಇಡಿ ಪರದೆ ವ್ಯವಸ್ಥೆ ಮಾಡಿ ಕಾರ್ಯಕ್ರಮದ ನೇರ ಪ್ರಸಾರ ಪ್ರದರ್ಶಿಸಲು ಹಾಗೂ ಎಲ್ಇಡಿ ಪರದೆಯಲ್ಲೇ ಬೆಳಗಾವಿ ಕಾರ್ಯಕ್ರಮದ ಸ್ಥಳದಿಂದ ಸ್ಥಳೀಯ ಕಾರ್ಯಕ್ರಮದ ಸ್ಥಳದೊಂದಿಗೆ ಪರಸ್ಪರ ಸಂವಾದ ನಡೆಸಬೇಕಿರುವುದರಿಂದ ಇದಕ್ಕೆ ಅಗತ್ಯವಿರುವ ಟಿವಿ ಹಾಗೂ ಎಲ್ಇಡಿ ಪರದೆಯನ್ನು ಮುಂಗಡ ಕಾಯ್ದಿರಿಸಲು ಡಿಸಿ ಸೂಚಿಸಿದರು.
ಗೃಹಲಕ್ಷ್ಮೀ ಯೋಜನೆ ಕುರಿತ ಕರಪತ್ರಗಳನ್ನು ಮನೆ ಮನೆಗೆ ವಿತರಿಸಿ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೀರುಗಂಟಿಗಳು, ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಳ್ಳಿ ಎಂದರು.
ನಗರ ವ್ಯಾಪ್ತಿಯ ಸ್ಥಳೀಯಮಟ್ಟದ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿಮಟ್ಟದಲ್ಲಿ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಸಲು ಶಿಷ್ಟಾಚಾರದಂತೆ ಸ್ಥಳೀಯ ಜನಪ್ರತಿನಿಧಿಗಳನ್ನು, ಸದಸ್ಯರನ್ನು ಆಹ್ವಾನಿಸಿ, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net