ದೀಪಾವಳಿ ಪ್ರಯುಕ್ತ ದೇವಸ್ಥಾನಗಳಿಗೆ ಭಕ್ತರ ದಂಡು

13-GPT-1
Published on
  • ಚಾಮರಾಜನಗರ : ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ತಾಲೂಕಿನ ಜನರು ಮಲೆಮಹದೇಶ್ವರ ಬೆಟ್ಟ, ಹಿಮವದ್ ಗೋಪಾಲಸ್ವಾಮಿ, ಪಾರ್ವತಿ ಬೆಟ್ಟ ಸೇರಿದಂತೆ ನಾನಾ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

  • ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮಳವಳ್ಳಿ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ರುದ್ರಾಕ್ಷಿ ರಥೋತ್ಸವ ನಡೆಸಲಾಯಿತು. ಪ್ರಧಾನ ಅರ್ಚಕ ನಂದೀಶ್ ನೇತೃತ್ವದಲ್ಲಿ ಶಿವಲಿಂಗಕ್ಕೆ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಉತ್ಸವ ಮೂರ್ತಿಯನ್ನು ಹುಲಿ ವಾಹನ ಹಾಗೂ ರುದ್ರಾಕ್ಷಿ ವಾಹನಗಳ ಮೇಲಿರಿಸಿ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಿಸಲಾಯಿತು. ತಾಲೂಕಿನ ನಾನಾ ಗ್ರಾಮಗಳ ಭಕ್ತರು ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೀಪಾವಳಿ ಹಬ್ಬಕ್ಕೆ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಲಾಗದ ಭಕ್ತರು ಇಲ್ಲಿನ ರಥೋತ್ಸವದಲ್ಲಿ ಪಾಲ್ಗೊಂಡರು. ದೇವಾಲಯಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.

  • ಪ್ರತಿ ವರ್ಷದಂತೆ ಈ ಬಾರಿಯೂ ತಾಲೂಕಿನ ತೆರಕಣಾಂಬಿ ಮತ್ತು ತೆರಕಣಾಂಬಿಹುಂಡಿ ಗ್ರಾಮಸ್ಥರು ತಮ್ಮ ಎತ್ತಿನ ಗಾಡಿಗಳೊಂದಿಗೆ ನೆರೆಯ ತಾಳವಾಡಿಗೆ ಸೇರಿದ ಕೊಂಗಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು. ಅಭಿಷೇಕ ಪೂಜೆ ಸಲ್ಲಿಸಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net