ದಲಿತ ಕುಟುಂಬಕ್ಕೆ ನ್ಯಾಯ ಕಲ್ಪಿಸಿ

ಎ.ಆರ್. ಕೃಷ್ಣಮೂರ್ತಿ
ಎ.ಆರ್. ಕೃಷ್ಣಮೂರ್ತಿ
Published on
ಧಾರವಾಡ: ಯಾವುದೇ ರೀತಿಯ ಒತ್ತಡಗಳಿಗೆ ಒಳಗಾಗದೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪೂರ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿರುವ ದಲಿತ ಕುಟುಂಬಕ್ಕೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇನಾಂವೀರಾಪೂರ ಗ್ರಾಮದಲ್ಲಿ ನಡೆದ ದೌರ್ಜನ್ಯ ಪ್ರಕರಣದ ಕುರಿತು ಸಮಿತಿಯ ಸದಸ್ಯರೊಂದಿಗೆ ಕಂದಾಯ, ಪೊಲೀಸ್ ಸೇರಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದರು. ದಲಿತ ಸಮುದಾಯದ ಮೇಲೆ ನಡೆದಿರುವ ಈ ರೀತಿಯ ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ದೊರಕುವಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಧಿಸಿದ ಯಾವುದೇ ರೀತಿಯ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆಯು ಅವುಗಳನ್ನು ತಕ್ಷಣವೇ ಸಂಬಧಪಟ್ಟ ಎಲ್ಲ ಇಲಾಖೆಗಳ ಗಮನಕ್ಕೆ ತರಬೇಕು. ಅಂತಹ ಪ್ರಕರಣಗಳ ಬಗ್ಗೆ ಅಗತ್ಯ ಮಾಹಿತಿ ಸಂಗ್ರಹಿಸಿ, ಕಾನೂನು ಬದ್ಧವಾಗಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಅಂತರ್ಜಾತಿ ವಿವಾಹಗಳ ಬಗ್ಗೆ ಜನರಿಗೆ ಅಗತ್ಯ ತಿಳುವಳಿಕೆ ನೀಡಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಜಿಲ್ಲಾಡಳಿತ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದರು.
ಸಮಿತಿ ಸದಸ್ಯರಾದ ಡಾ. ಡಿ.ತಿಮ್ಮಯ್ಯ, ಹೇಮಲತಾ ನಾಯಕ, ಎಫ್.ಎಚ್. ಜಕ್ಕಪ್ಪನವರ, ಕೃಷ್ಣ ನಾಯಕ, ಡಾ. ಚಂದ್ರು ಲಮಾಣಿ, ಸಮೃದ್ಧಿ ಮಂಜುನಾಥ ಮಾತನಾಡಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಜಿಲ್ಲಾಡಳಿತವು ಕೈಗೊಂಡಿರುವ ಕ್ರಮಗಳು, ತನಿಖೆಯ ಪ್ರಗತಿ ಹಾಗೂ ಸಂತ್ರಸ್ತ ಕುಟುಂಬಕ್ಕೆ ನೀಡಲಾಗಿರುವ ನೆರವಿನ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಸಮಿತಿ ಸದಸ್ಯರಾದ ದುರ್ಯೋಧನ ಐಹೊಳೆ, ಜಿಪಂ ಸಿಇಒ ಭುವನೇಶ ಪಾಟೀಲ ಇದ್ದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ. ಶುಭ ಸ್ವಾಗತಿಸಿದರು. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಬೆಳಗಾವಿ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಡಿವೈಎಸ್ಪಿ ವಿನೋದ ಮುಕ್ತೇದಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net