ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ kannada

kannada ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆ ಅಳವಡಿಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಹುಬ್ಬಳ್ಳಿಯ ಆರ್​ಆರ್​ಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
kannada ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆ ಅಳವಡಿಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಹುಬ್ಬಳ್ಳಿಯ ಆರ್​ಆರ್​ಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
Published on
ರೈಲ್ವೆಯ ವಿವಿಧ ಇಲಾಖೆಗಳ ಸಿಬ್ಬಂದಿಗೆ ಮುಂಬಡ್ತಿ ನೀಡುವುದಕ್ಕಾಗಿ ಮಾ. 17 ಮತ್ತು 18ರಂದು ಕಂಪ್ಯೂಟರ್ ಆಧಾರಿತ ಇಲಾಖಾ ಪರೀಕ್ಷೆ ಆಯೋಜಿಸಲಾಗಿತ್ತು.
ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆ ಅಳವಡಿಸುವಂತೆ ಹಲವಾರು ಬಾರಿ ಹೋರಾಟ ನಡೆಸಿದ್ದರೂ, ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಳೆದ ಸೆಪ್ಟಂಬರ್​ನಲ್ಲಿ ರೈಲ್ವೆ ಮುಂಬಡ್ತಿ ಪರೀಕ್ಷೆಗಾಗಿ ಅಧಿಸೂಚನೆ ಹೊರಡಿಸಿದ್ದ ಸಂದರ್ಭದಲ್ಲಿ ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಪರೀಕ್ಷೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು.
ಆದರೂ, ಕನ್ನಡ ಹೊರತುಪಡಿಸಿ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಖಂಡನೀಯ ಎಂದು ಕರವೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಆರ್​ಆರ್​ಸಿ ಚೇರ್ಮನ್ ಆಸಿಫ್ ಅನ್ಸಾರಿ, ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಅಳವಡಿಕೆಗೆ ಸಂಬಂಧಿಸಿದಂತೆ ರೈಲ್ವೆ ಬೋರ್ಡ್ ಗಮನಕ್ಕೆ ತರುತ್ತೇನೆ. ಪರೀಕ್ಷೆ ನಡೆಸಲು ಅವಕಾಶ ಕೊಡುವಂತೆ ಮನವಿ ಮಾಡಿದರು.
ಆದರೆ, ಪ್ರತಿಭಟನೆ ಹಿಂಪಡೆಯಲು ಒಪ್ಪದ ಕರವೇ ಕಾರ್ಯಕರ್ತರು, ಯಾವುದೇ ಕಾರಣಕ್ಕೂ ಪರೀಕ್ಷೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದರು.
ಹಾಗಾಗಿ, ಪರೀಕ್ಷೆಯನ್ನು ಮುಂದೂಡಿ, ಮತ್ತೊಂದು ದಿನ ನಡೆಸುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶ ನೀಡುವವರೆಗೂ ಪ್ರತಿಭಟನೆ ನಡೆಸುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ಮೇಟಿ, ಸಾಗರ ಗಾಯಕವಾಡ, ಗದಗ ಜಿಲ್ಲಾಧ್ಯಕ್ಷ ಹನಮಂತಪ್ಪ ಅಬ್ಬಿಗೇರಿ, ಕೊಪ್ಪಳ ಜಿಲ್ಲಾಧ್ಯಕ್ಷ ಬಿ. ಗಿರೀಶಾನಂದ, ಹಾವೇರಿ ಜಿಲ್ಲಾಧ್ಯಕ್ಷ ಗಿರೀಶ , ರಾಜ್ಯ ಕಾರ್ಯದರ್ಶಿ ರೆಹಮಾನ ಹೊಳಿ, ರಾಜ್ಯ ಸಂಚಾಲಕ ರುದ್ರೇಶ ಹವಳದ, ಸಂಗನಗೌಡ ನರಗುಂದ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net