ರಾಜ್ಯ ಸರ್ಕಾರಕ್ಕೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಒತ್ತಾಯ.
ನೀತಿ ಸಂಹಿತೆ ಜಾರಿಗೂ ಮುನ್ನವೇ ಅಧಿಸೂಚನೆ ಹೊರಡಿಸಬೇಕು.
ಹೋರಾಟದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬಾರದು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ ಇತ್ತೀಚೆಗೆ ನಡೆದ ನಿರುದ್ಯೋಗಿ ಯುವಕರ ಹೋರಾಟಕ್ಕೆ ಮಣಿದು ರಾಜ್ಯ ಕಾಂಗ್ರೆಸ್ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಬಿಜೆಪಿ ಹಾಗೂ ವಿದ್ಯಾರ್ಥಿ ಸಂಘಟನೆ ಅಕ್ಷಾ ಸಂಘಟಿತ ಹೋರಾಟಕ್ಕೆ ಸಿಕ್ಕಿರುವ ಜಯ ಇದು. ಈ ಪ್ರತಿಭಟನೆಗೆ ಸರ್ಕಾರ ನಲುಗಿದೆ ಎಂದರು.
ಸರ್ಕಾರ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಕೆಲವೇ ತಿಂಗಳುಗಳಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆೆಗಳು ನಡೆಯಲಿದ್ದು, ನೀತಿ ಸಂಹಿತೆ ಜಾರಿಗೂ ಮುನ್ನವೇ ಅಧಿಸೂಚನೆ ಹೊರಡಿಸಬೇಕು. ಅಧಿಸೂಚನೆ ಹೊರಡಿಸಿದ ಮೂರು ತಿಂಗಳ ಒಳಗಾಗಿ ನೇಮಕಾತಿ ಪತ್ರ ನೀಡಬೇಕು ಎಂದು ಆಗ್ರಹಿಸಿದರು.
ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಈ ನೆಪವೊಡ್ಡದೇ ಈ ಹಿಂದಿನ 3-3-5 ಅನುಪಾತದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು.
ಈ ಸಂಬಂಧ ವಿಶೇಷ ಸಭೆ ಕರೆದು, ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ನ್ಯಾಯಾಲಯಕ್ಕೆ ನಿರುದೊ್ಯೕಗಿಗಳ ಸಮಸ್ಯೆಗಳನ್ನು ಮನವರಿಕೆ ಮಾಡಲು ಪ್ರಯತ್ನಿಸಬೇಕು. ಯಾವ ಸಮಾಜ, ಸಮುದಾಯಕ್ಕೂ ಮೀಸಲಾತಿ ವಿಚಾರದಲ್ಲಿ ಅನ್ಯಾಯ ಆಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಹೋರಾಟದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ನಾಯಕರ ಹಾಗೂ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬಾರದು ಎಂದು ಆಗ್ರಹಿಸಿದರು.
ಮಾಜಿ ಮಹಾಪೌರ ರಾಮಣ್ಣ ಬಡಿಗೇರ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.