

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಸರ್ಕಾರಿ ಶಾಲೆಯ ಸೇವಾ ಬಸ್ತಿಯಲ್ಲಿ ಸೇವಾ ಭಾರತಿ ಟ್ರಸ್ಟ್ನ ಮಾತೃಛಾಯಾ ಬಾಲಕಲ್ಯಾಣ ಕೇಂದ್ರದ ವತಿಯಿಂದ ಮಕ್ಕಳಿಗಾಗಿ ಶುಕ್ರವಾರ ವಿಶೇಷ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಮತ್ತು ಅವರ ಸಾಮಾನ್ಯ ಜ್ಞಾನವನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುತ್ತಲಿನ ಅನೇಕ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ವಿಜ್ಞಾನ, ಇತಿಹಾಸ, ಪ್ರಚಲಿತ ವಿದ್ಯಮಾನಗಳು ಹಾಗೂ ಕ್ರೀಡಾ ಲೋಕಕ್ಕೆ ಸಂಬಂಧಿಸಿದ ಆಸಕ್ತಿದಾಯಕ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಲಾಯಿತು. ವಿದ್ಯಾರ್ಥಿಗಳು ಅತ್ಯಂತ ಚುರುಕಿನಿಂದ ಮತ್ತು ಸ್ಪರ್ಧಾತ್ಮಕ ಮನೋಭಾವದಿಂದ ಪ್ರಶ್ನೆಗಳಿಗೆ ಉತ್ತರಿಸಿ ತಮ್ಮ ಜ್ಞಾನ ಪ್ರದರ್ಶಿಸಿದರು.
ಬಾಲಕಲ್ಯಾಣ ಕೇಂದ್ರದ ಅಧ್ಯಕ್ಷೆ ಕಮಲಾ ಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿ ಕೇವಲ ಪಠ್ಯಪುಸ್ತಕದ ಜ್ಞಾನ ಅಲ್ಲದೆ, ಇಂತಹ ರಸಪ್ರಶ್ನೆ ಸ್ಪರ್ಧೆಗಳ ಮೂಲಕ ಸಾಮಾನ್ಯ ಜ್ಞಾನ ಹಾಗೂ ಆಲೋಚನಾ ಸಾಮರ್ಥ್ಯವನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಸೇವಾಬಸ್ತಿಯ ಮಕ್ಕಳಲ್ಲಿ ಅಪಾರ ಪ್ರತಿಭೆ ಇದ್ದು, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ವಿಜೇತರಾದ ಮಕ್ಕಳಿಗೆ ಸಂಸ್ಥೆಯ ವತಿಯಿಂದ ಆಕರ್ಷಕ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ಪ್ರಮುಖರಾದ ರತ್ನಾ ಮಾತಾಜಿ, ನಂದಾ ಸವಡಿ, ಮಂಜುಳಾ ಕೃಷ್ಣನ್, ಹಾಗೂ ಸೇವಾ ಭಾರತಿ ಸಂಸ್ಥೆಯ ಪದಾಧಿಕಾರಿಗಳು, ಸ್ವಯಂಸೇವಕರು ಮತ್ತು ಪಾಲಕರು ಉಪಸ್ಥಿತರಿದ್ದರು.