

ಕುಂದಗೋಳ: ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ತೀವ್ರ ಮಳೆ ಅಭಾವ ಹಾಗೂ ಅಸಮತೋಲಿತ ಮಳೆಯಿಂದಾಗಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಶೇ.96ರಷ್ಟು ಬಿತ್ತನೆಯಾಗಿದ್ದರೂ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಳವಳ ವ್ಯಕ್ತಪಡಿಸಿದರು.
ಬರ ಘೋಷಣೆಗೆ ಕೇಂದ್ರ ಸರ್ಕಾರದ ತಾಂತ್ರಿಕ ಮಾನದಂಡಗಳಿದ್ದು, ಮಳೆಯ ಪ್ರಮಾಣದ ಜತೆಗೆ ಬೆಳೆ ಬೆಳವಣಿಗೆಯ ಹಂತದಲ್ಲಿ ಮಳೆಯಾಗದಿರುವುದನ್ನೂ ಪರಿಗಣಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು. ಸ್ಥಳೀಯ ರೈತರು, ಶಾಸಕರು ಹಾಗೂ ಕೃಷಿ ತಜ್ಞರ ಸಲಹೆಗಳನ್ನು ಕ್ರೋಡೀಕರಿಸಿ, ವಿಮೆ ಸೇರಿದಂತೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ತಲುಪಿಸಲು ಶ್ರಮಿಸುವುದಾಗಿ ಸಚಿವರು ಭರವಸೆ ನೀಡಿದರು.
ಕಳೆದ 12 ವರ್ಷಗಳಿಂದ ಅಧಿಕಾರದಲ್ಲಿರುವ ಕೇಂದ್ರ ಬಿಜೆಪಿ ಸರ್ಕಾರ ಉದ್ಯಮಿಗಳ ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡಿದಂತೆ ರೈತರ ಸಾಲವನ್ನೂ ಮನ್ನಾ ಮಾಡಬೇಕು. ತಮ್ಮ ವಿಶ್ವಗುರು ಬಳಿ ಮಾತನಾಡಿ ಕೇಂದ್ರದ ವ್ಯಾಪ್ತಿಯಲ್ಲಿರುವ ವಿಮಾ ಕಂಪನಿಗಳಿಂದ ರೈತರಿಗೆ ಪರಿಹಾರ ಕೊಡಿಸಲಿ.
— ಸಂತೋಷ ಲಾಡ್ ಸಚಿವ