ಹುಬ್ಬಳ್ಳಿ: ಇನಾಂವೀರಾಪೂರ ಗ್ರಾಮದಲ್ಲಿ ನಡೆದಿರುವ ದೌರ್ಜನ್ಯ ಪ್ರಕರಣದ ಕುರಿತು ತನಿಖೆಗೆ ವಿಶೇಷ ಸರ್ಕಾರಿ ಅಭಿಯೋಜಕರು ಹಾಗೂ ತ್ವರತ ನ್ಯಾಯಾಲಯ ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಕೆ. ರಾಮಚಂದ್ರರಾವ್ (ramachandrarao) ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನರ ವಿರುದ್ಧ ದೂರು ದಾಖಲಾಗಿದೆ. ಈಗಾಗಲೇ 8 ಜನರನ್ನು ಬಂಧಿಸಿದ್ದು, ಒಬ್ಬರು ಅಪ್ರಾಪ್ತ, ಉಳಿದ ಐವರು ಮಹಿಳೆಯರಿದ್ದಾರೆ. ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದರು.
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯವು ಮುಖ್ಯ ಸಾಕ್ಷಿಯಾಗಿದೆ. ಅದನ್ನು ವಶಕ್ಕೆ ಪಡೆದಿದ್ದು, ಎಫ್‌ಎಸ್‌ಎಲ್‌ಗೆ ರವಾನಿಸಲಾಗಿರುತ್ತದೆ. ದೌರ್ಜನ್ಯ ಪ್ರಕರಣದಲ್ಲಿ 60 ದಿನಗಳೊಳಗೆ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಈ ಪ್ರಕರಣಕ್ಕೆ ಡಿಜಿಟಲ್ ಸಾಕ್ಷ್ಯಾಧಾರಗಳು ಬಹಳ ಮುಖ್ಯವಾಗಿವೆ. ನೊಂದವರಿಗೆ ನ್ಯಾಯ ಒದಗಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮವಹಿಸಲಾಗುವುದು. ಈಗಾಗಲೇ ಇನಾಂವೀರಾಪೂರ ಗ್ರಾಮದಲ್ಲಿ ಶಾಂತಿ ಸಭೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿಯೂ ಮತ್ತಷ್ಟು ಶಾಂತಿ ಸಭೆ ಏರ್ಪಡಿಸಲಾಗುವುದು ಎಂದರು.