ಸಮಸ್ಯೆಗಳನ್ನು ತ್ವರಿತವಾಗಿ ನಿವಾರಿಸಿ

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಎಸ್.ಆರ್. ಪಾಟೀಲ ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಎಸ್.ಆರ್. ಪಾಟೀಲ ಮಾತನಾಡಿದರು.
Published on
ಧಾರವಾಡ: ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮಳೆಯಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಉಂಟಾಗುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು.
ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ನಿರುದ್ಯೋಗಿ ಯುವಕ, ಯುವತಿಯರಿಗೂ ಸಕಾಲದಲ್ಲಿ ಯುವನಿಧಿ ಭತ್ಯೆ ತಲುಪುವಂತೆ ಕ್ರಮ ವಹಿಸಬೇಕು. ಅರ್ಹ ಯುವಕರು ಅರ್ಜಿ ಸಲ್ಲಿಸಿದ ಬಳಿಕ ಯಾವುದೇ ಕಾರಣಕ್ಕೂ ಭತ್ಯೆ ಪಡೆಯಲು ವಿಳಂಬವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು ಎಂದು ಅವರು ತಿಳಿಸಿದರು.
ಮಕ್ಕಳ ಬಸ್ ಪಾಸ್‍ಗಳು ಯಾವುದೇ ರೀತಿಯಲ್ಲೂ ಬಾಕಿ ಉಳಿಯದಂತೆ ಕ್ರಮ ವಹಿಸಬೇಕು. ಧಾರವಾಡ ಜಿಲ್ಲೆ ಹಾಗೂ ತಾಲೂಕು ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳ ಶೌಚಾಲಯಗಳ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಬೇಕು. ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ಸ್ವಚ್ಛತೆ ಮತ್ತು ಉತ್ತಮ ಪರಿಸರ ದೊರೆಯುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸುಧೀರ ಎಸ್. ಬೋಳಾರ, ರತ್ನಾ ತೇಗೂರಮಠ, ರೇಹನ್ ರಝಾ ಐನಾಪೂರಿ ಮಾತನಾಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ವರ್ಧಮಾನ ಹಿರೇಗೌಡರ, ಶಿವಾನಂದ ಭೂಮಣ್ಣನವರ, ನೆಹರು ಪಾಟೀಲ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net