ಸಂಚಾರ ತಡೆದು ಪ್ರತಿಭಟನೆ

farmer protest
ಕಬ್ಬಿಗೆ ನ್ಯಾಯಯುತ ಬೆಲೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಹುಬ್ಬಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಂಗಳವಾರ ಸಂಚಾರ ತಡೆದು ಪ್ರತಿಭಟಿಸಿದರು.
Published on: 

ಹುಬ್ಬಳ್ಳಿ: ಕಬ್ಬಿಗೆ ನ್ಯಾಯಯುತ ಬೆಲೆ ಹಾಗೂ ಸಕ್ಕರೆಗೆ ಕನಿಷ್ಠ ಬೆಲೆ ಏರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ನಗರ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಂಗಳವಾರ ಸಂಚಾರ ತಡೆದು ಪ್ರತಿಭಟಿಸಿದರು.

ಬೆಳಗ್ಗೆ 11ಗಂಟೆ ಸುಮಾರಿಗೆ ಗಬ್ಬೂರು ವೃತ್ತರದ ಬಳಿ ರಸ್ತೆ ಸಂಚಾರ ತಡೆ ನಡೆಸಿದ ರೈತರು, ಕೆಲ ಸಮಯದ ಬಳಿಕ ಅದರಗುಂಚಿ ಮತ್ತು ನೂಲ್ವಿ ಮಧ್ಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಕೇಂದ್ರ ಸರ್ಕಾರ, ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಘೋಷಣೆ ಕೂಗಿದರು.

ರಾಷ್ಟ್ರೀಯ ಹೆದ್ದಾರಿಗೆ ಲಾರಿ, ಟ್ರಾೃಕ್ಟರ್, ಎತ್ತಿನ ಬಂಡಿ, ದ್ವಿಚಕ್ರ ವಾಹನ, ಕಲ್ಲುಗಳನ್ನು ಅಡ್ಡಗಟ್ಟಿ ಪ್ರತಿಭಟಿಸಿದರು. ರೈತರ ಪ್ರತಿಭಟನೆಯ ಮಾಹಿತಿ ಇಲ್ಲದ ಪ್ರಯಾಣಿಕರು ನೆತ್ತಿ ಸುಡುವ ಬಿಸಿಲಿನಲ್ಲಿ ಗಂಟೆಗಟ್ಟಲೇ ರಸ್ತೆಯಲ್ಲೇ ನಿಂತು ಹೈರಾಣಾದರು. ಬಳಿಕ ಎಕಮುಖ ಮಾರ್ಗವಾಗಿ ಕುಂದಗೋಳ ಕ್ರಾಸ್‌ವರೆಗೂ ಸಂಚರಿಸಿ, ಅಲ್ಲಿಂದ ಅಡ್ಡದಾರಿ ಹಿಡಿದು ಮುಂದೆ ಸಾಗಲು ಪೊಲೀಸರು ಅನುವು ಮಾಡಿಕೊಟ್ಟರು.

ಶ್ರೀ ಬಸವೇಶ್ವರ ರೈತ ಸೇವಾ ಸಂಘದ ಮುಖಂಡ ಶಿವಾನಂದ ಹೊಸೂರ ಮಾತನಾಡಿ, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ. ಕಬ್ಬಿನ ಬೆಲೆ ನಿಗದಿ ಕುರಿತು ಸೋಮವಾರ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಯಾವುದೇ ತಕ್ಷಣದ ನಿರ್ಧಾರವಾಗಿಲ್ಲ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳ, ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ ನಿಗದಿ ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳು ಜಾರಿಗೆ ಬರಲೇಬೇಕು ಎಂದು ಒತ್ತಾಯಿಸಿದರು.

ರೈತ ಸಂಘಟನೆಗಳು ಕರೆ ನೀಡಿದ್ದ ಪ್ರತಿಭಟನೆಗೆ ವಿವಿಧ ಕನ್ನಡಪರ ಸಂಘಟನೆಗಳು, ಉತ್ತರ ಕರ್ನಾಟಕ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ಆಮ್ ಆದ್ಮಿ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net