

ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ವಿರುದ್ಧ ಮತ್ತು ಹಾಗೂ ಇದನ್ನು ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತಾಧಿಗಳನ್ನು ಹೊಂದಿರುತ್ತದೆ. ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿರುತ್ತದೆ. ಅಂತಹ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಹಿಂದೂಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದ್ದು, ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ್ಯ ನಡೆದಿದೆ. ಭಾರತದ ನ್ಯಾಯಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರವು ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಆತ ಹೇಳಿದ ಕಡೆಗಳೆಲ್ಲೆಲ್ಲಾ ಗುಂಡಿಗಳನ್ನು ತೋಡಿದೆ. ಆದರೆ, ಅನಾಮಿಕನ ಹಿಂದಿರುವ ದುಷ್ಟ ವ್ಯಕ್ತಿಗಳು ಯಾರು? ಮತ್ತು ಅವರು ಮಾಡುತ್ತಿರುವ ಸಂಚುಗಳೇನು ಎಂಬುದನ್ನು ಈವರೆಗೂ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ತಿಳಿಸಿಲ್ಲ. ಆದ್ದರಿಂದ ಹಿಂದುಗಳ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಸುನೀಲ್ ಸುಬ್ರಮಣಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ರಾಭೀನ್ ದೇವಯ್ಯ, ಬಿ.ಬಿ.ಭಾರತೀಶ್, ಪ್ರಮುಖರಾದ ಮಹೇಶೈ ಜೈನಿ, ಅರುಣ್ ಕುಮಾರ್, ಉಮೇಶ್ ಸುಬ್ರಮಣಿ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.