ಧರ್ಮಸ್ಥಳ ಅಪಪ್ರಚಾರ ‘ಸರ್ಕಾರ ಕ್ರಮ ಕೈಗೊಳ್ಳಲಿ’

SDP UDGHATANE
Published on

ಸಿದ್ದಾಪುರ: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಿರಸಿ ಜಿಲ್ಲಾ ಜನಜಾಗೃತಿ ವೇದಿಕೆ ಆಗ್ರಹಿಸಿದೆ.

ಪಟ್ಟಣದ ಶಂಕರಮಠದ ಸಮುದಾಯ ಭವನದಲ್ಲಿ ಶಿರಸಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಳಿಂಗರಾಜ್ ಎಂ.ಎಸ್. ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ ವಿನ್ಸಂಟ್ ಪಾಯಸ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ 2000ನೇ ಮದ್ಯವರ್ಜನ ಶಿಬಿರ ನಡೆಸಲು ಸಿದ್ಧತೆ ನಡೆಸಲಾಗುತ್ತದೆ. 20 ಶಿಬಿರಗಳನ್ನು ವಿವಿಧ ಕಡೆ ನಡೆಸುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಲಿದೆ. 20 ಶಿಬಿರಗಳಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಂದು ಶಿಬಿರ ನಡೆಸಲು ಅವಕಾಶ ನೀಡಲಾಗುತ್ತಿದೆ. ಅದನ್ನು ಒಳ್ಳೆಯ ಮಾದರಿ ಶಿಬಿರವನ್ನಾಗಿಸುವ ಜವಾಬ್ದಾರಿ ಜಿಲ್ಲಾ ಜನಜಾಗೃತಿ ವೇದಿಕೆ ಮೇಲಿದೆ ಎಂದರು.

ವಿಶ್ವ ತಂಬಾಕು ವಿರೋಧಿ ದಿನಾಚರಣೆ, ವಿಶ್ವಮಾದಕ ವಸ್ತುಗಳ ವಿರೋಧಿ ದಿನಾಚರಣೆ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಅನುಷ್ಠಾನ, ಮದ್ಯವರ್ಜನ ಶಿಬಿರದ ಬಗ್ಗೆ, ಗಾಂಧಿ ಜಯಂತಿ ಕಾರ್ಯಕ್ರಮ, ನವ ಜೀವನ ಪಾಲಕರ ತರಬೇತಿ, ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಕ್ರಮದ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು.

ಜನಜಾಗೃತಿ ವೇದಿಕೆ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿರಸಿ ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷೆ ಗೌರಿ ನಾಯ್ಕ, ಪ್ರಮುಖರಾದ ಉಪೇಂದ್ರ ಪೈ, ರಾಮು ಕಿಣಿ, ಜನಜಾಗೃತಿ ವೇದಿಕೆಯ ಆರು ತಾಲೂಕಿನ ಪದಾಧಿಕಾರಿಗಳು, ಕಾರ್ಯದರ್ಶಿಗಳು,ಮೇಲ್ವಿಚಾರಕರಾದ ನಿತೇಶ್ ಕೆ., ಸತೀಶ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ಜಿಲ್ಲಾ ನಿರ್ದೇಶಕ ದಿನೇಶ ಎಂ. ಸಭೆಯ ಮಾಹಿತಿ ನೀಡಿದರು. ಶಿರಸಿ ತಾಲೂಕು ಯೋಜನಾಧಿಕಾರಿ ರಾಘವೇಂದ್ರ, ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net