ಸೆ.13ರಂದು ಆಯುಷ್ಮಾನ್ ಭವ 3.0 ಗೆ ಚಾಲನೆ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಮಾಹಿತಿ

Dho Meeting
Published on

ಮಂಡ್ಯ: ಸಾರ್ವಜನಿಕರ ಆರೋಗ್ಯಕ್ಕೆ ಚಿಕಿತ್ಸೆ ನೀಡಲು ಸಹಕಾರಿಯಾಗಿರುವ ಆಯುಷ್ಮಾನ್ ಭವ 3.0 ಗೆ ಸೆ.13ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಮಾಹಿತಿ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದಲ್ಲಿ ರಾಷ್ಟ್ರಪತಿ ಚಾಲನೆ ನೀಡಲಿದ್ದಾರೆ. ಅಂತೆಯೇ ಜಿಲ್ಲೆಯ ಕ್ಯಾತುಂಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ ಕಾರ್ಯಕ್ರಮವನ್ನು ವರ್ಚುಯಲ್ ಮೂಲಕ ಪ್ರಸಾರ ಮಾಡಲಾಗುವುದು ಎಂದರು.

ಆಯುಷ್ಮಾನ್ ಆರೋಗ್ಯ ಕಾರ್ಡ್‌ನ ಉಪಯುಕ್ತತೆ ಕುರಿತಂತೆ ಜಿಲ್ಲೆಯಲ್ಲಿ ಸೆ.17ರಿಂದ ಅ.2ರವರೆಗೆ ಮನೆ-ಮನೆಗೆ ಭೇಟಿ ನೀಡಿ ಪ್ರಚಾರ ಕಾರ್ಯ ಕೈಗೊಳ್ಳಲಾಗುವುದು. ಇದಕ್ಕಾಗಿ ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಸಹಕರಿಸಬೇಕು. ಶಾಲೆ, ಕಾಲೇಜು, ವಸತಿ ಶಾಲೆ, ವಸತಿನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಕಾರ್ಡ್ ಮಾಡಿಸಲು ಹಾಗೂ ಅವರ ಪಾಲಕರಿಗೆ ಮಾಹಿತಿ ನೀಡಬೇಕು. ಇದರೊಂದಿಗೆ ಜಿಲ್ಲೆಯಲ್ಲಿ ಹೆಚ್ಚಿನ ಜನರು ಆಯುಷ್ಮಾನ್ ಆರೋಗ್ಯ ಕಾರ್ಡ್ ಪಡೆದುಕೊಳ್ಳಲು ಹೆಸರು ನೋಂದಾಯಿಸಿಕೊಳ್ಳುವಂತೆ ಮಾಡಬೇಕು ಎಂದರು.

ಹೆಲ್ತ್ ಆ್ಯಂಡ್ ವೆಲ್ನೆಸ್ ಸೆಂಟರ್, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರತಿ ಮಂಗಳವಾರ ವಿಷಯಧಾರಿತ ಶಿಬಿರ ಆಯೋಜಿಸಿ ಸಾರ್ವಜನಿಕರಲ್ಲಿರುವ ರೋಗ ಪತ್ತೆ ಮಾಡಿ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುವುದು. ಸಾಂಕ್ರಾಮಿಕವಾಗಿ ಹರಡದೆ ಇರುವ ರೋಗಗಳು(ಮಧುಮೇಹ, ರಕ್ತದ ಒತ್ತಡ ಇತ್ಯಾದಿ), ಗರ್ಭಿಣಿಯರು ಮತ್ತು ಪೌಷ್ಟಿಕ ಆಹಾರದ ಜಾಗೃತಿ ಸೇರಿದಂತೆ ವಿವಿಧ ಶಿಬಿರಗಳನ್ನು ಡಿಸೆಂಬರ್ ಅಂತ್ಯದವರೆಗೆ ಆಯೋಜಿಸಲಾಗುವುದು. ಆದಿಚುಂಚನಗಿರಿ ವೈದ್ಯಕೀಯ ಶಿಕ್ಷಣ ಸಂಸ್ಥೆ, ಮಿಮ್ಸ್ ಸೇರಿದಂತೆ ವಿವಿಧ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಶಿಬಿರದಲ್ಲಿ ಭಾಗವಹಿಸಲಿವೆ ಎಂದು ವಿವರಿಸಿದರು.

ಸಭೆಯಲ್ಲಿ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ.ಸಿದ್ದಲಿಂಗೇಶ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net