

ಕೆ.ಆರ್.ಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ದಿಢೀರ್ ಭೇಟಿ ನೀಡಿ, ರೋಗಿಗಳ ಆರೋಗ್ಯ, ಕುಶಲೋಪರಿ ವಿಚಾರಣೆ ನಡೆಸಿ ಆಸ್ಪತ್ರೆಯ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ಪರಿಶೀಲಿಸಿದರು.
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಬಡಜನರೇ ಆಗಿರುವುದರಿಂದ ವೈದ್ಯರು ರೋಗಿಗಳನ್ನು ನಗುಮೊಗದಿಂದ ಆತ್ಮೀಯತೆಯೊಂದಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕಲ್ಲದೆ, ಸರ್ಕಾರವೇ ಉಚಿತವಾಗಿ ನೀಡುವ ಔಷಧಗಳು ಹಾಗೂ ಮಾತ್ರೆಗಳನ್ನು ನೀಡಿ ಶೀಘ್ರವೇ ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ ಅವರು, ಆಸ್ಪತ್ರೆಯ ವಾತಾವರಣ ಹಾಗೂ ವಾರ್ಡ್‌ಗಳನ್ನು ಸ್ವಚ್ಛತೆಯಿಂದ ಇಟ್ಟುಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಶಿಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಜಿತ್ ಸೇರಿದಂತೆ ಆಸ್ಪತ್ರೆಯ ತಜ್ಞ ವೈದ್ಯರು ಹಾಗೂ ಸಿಬ್ಬಂದಿ ಇದ್ದರು. ವೈದ್ಯರು ಹಾಗೂ ಶೂಶ್ರೂಷಕರ ಸೇವೆಯ ಬಗ್ಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳು ಹಾಗೂ ಸಾರ್ವಜನಿಕರು ಡಿಎಚ್‌ಒ ಎದುರು ಮೆಚ್ಚುಗೆ ಮಾತುಗಳನ್ನಾಡಿದರು.
ಕಾಮಗಾರಿ ಪರಿಶೀಲನೆ: ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಯಿ-ಮಗು ಆಸ್ಪತ್ರೆಯ ಹೈಟೆಕ್ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿದ ಡಿಎಚ್‌ಒ ಡಾ.ಕೆ.ಮೋಹನ್, ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಜತೆಗೆ ಆದಷ್ಟು ಶೀಘ್ರವಾಗಿ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಹದ್ದಿನ ಕಣ್ಣಿಡಿ: ಹೆಣ್ಣು ಭ್ರೂಣ ಹತ್ಯೆಯಂತಹ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಪರಿವೀಕ್ಷಕರು ಪಟ್ಟಣ ಸೇರಿದಂತೆ ತಾಲೂಕಿನಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಧಿಡೀರ್ ದಾಳಿ ನಡೆಸಿ ಪರಿಶೀಲನೆ ನಡೆಸುವ ಜತೆಗೆ ಹದ್ದಿನ ಕಣ್ಣಿಟ್ಟು ಕಾನೂನುಬಾಹಿರ ಕೃತ್ಯಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಮೋಹನ್ ಖಡಕ್ ನಿರ್ದೇಶನ ನೀಡಿದರು.