

ಬಳ್ಳಾರಿ: ನನ್ನ ಉಸ್ತುವಾರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ದೂರು ಬಂದರೆ ಸುಮ್ಮನಿರುವುದಿಲ್ಲ, ಅಂತಹ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.
ನಗರದ ಜಿಲ್ಲಾ ಪಂಚಾಯತ್ ನಜೀರ್‌ಸಾಬ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಕರ್ನಾಟಕ ಅಭಿವೃದ್ಧಿ ಎರಡನೇ (ವಾರ್ಷಿಕ) ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಆಯುಷ್ ಇಲಾಖೆಯಲ್ಲಿ ಔಷಧ ಹಾಗೂ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ಕುರಿತಂತೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಇಲಾಖೆಯ ಪ್ರಗತಿಯ ಬಗ್ಗೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ, ಏಕೆ? ಎಂದು ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗೆ ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಬೇಕು ಹಾಗೂ ಕೆಲವು ಆಸ್ಪತ್ರೆಗಳಲ್ಲಿ ಹಣ ಪಡೆದುಕೊಂಡು ಸೇವೆ ನೀಡುತ್ತಿರುವುದು ಕಂಡುಬರುತ್ತಿದ್ದು, ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.
ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ರಾತ್ರಿ ಸಮಯದಲ್ಲಿ ತುರ್ತು ಸೌಲಭ್ಯಕ್ಕಾಗಿ ಆಸ್ಪತ್ರೆಗಳ ನರ್ಸ್‌ಗಳಿಗೆ ಕರೆ ಮಾಡಿದಾಗ, ಶಾಸಕರ ಕರೆ ಎಂಬುದು ಲೆಕ್ಕಿಸದೆ, ಕರೆ ಸ್ವೀಕರಿಸುವುದಿಲ್ಲ ಎಂದು ಹೇಳಿದರು.
ಅದಕ್ಕೆ ಸಚಿವ ಬಿ.ನಾಗೇಂದ್ರ ಪ್ರತಿಕ್ರಿಯಿಸಿ, ಯಾರಿಗಾದರೂ ಅಪಘಾತವಾದರೆ, ಅವರನ್ನು ಸಂಪರ್ಕಿಸಿದರೆ, ಕರೆ ಸ್ವೀಕರಿಸುವುದಿಲ್ಲ ಎಂದರೆ ಏನು ಅರ್ಥ ಎಂದು ಸಚಿವರು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಹಂತದ ಕುಡಿಯುವ ನೀರಿನ ಯೋಜನೆಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.
ಈ ಕುರಿತು ಮಧ್ಯಪ್ರವೇಶಿಸಿದ ಕಂಪ್ಲಿ ಶಾಸಕ ಗಣೇಶ್, ಸರ್ಕಾರ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಹಣ ವ್ಯಯ ಮಾಡುತ್ತಿದೆ, ಆದರೆ ಹಣ ದುರುಪಯೋಗವಾಗುವುದು ತಪ್ಪುತ್ತಿಲ್ಲ ಮತ್ತು ರಸ್ತೆಗಳು ದುರಸ್ತಿಗೊಳ್ಳುತ್ತಿರುವುದು ತಪ್ಪುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಪ್ರತಿ ತಾಲೂಕಿನಲ್ಲಿ ಕೆಟ್ಟು ಹೋಗಿರುವ ಆರ್‌ಒ ಘಟಕಗಳನ್ನು ಗುರುತಿಸಿ, ಅವುಗಳ ದುರಸ್ತಿಗೆ ಕ್ರಮ ವಹಿಸಬೇಕು. ಅರ್ಹ ಗುತ್ತಿಗೆದಾರರರಿಗೆ ಕಾಮಗಾರಿ ನೀಡಬೇಕು. ಜನರಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂದು ತಾಪಂ ಇಒಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿಯರ್‌ಗಳಿಗೆ ಸೂಚಿಸಿದರು.
ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪೂರ್ಣ ಮಾಹಿತಿ ನೀಡುವುದು ಸರಿಯಲ್ಲ. ಅಧಿಕಾರಿಗಳು ಮುಂದಿನ ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಇಲ್ಲದಿದ್ದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಸಭೆಗೆ ಗೈರು ಹಾಜರಾದವರಿಗೆ ನೋಟಿಸ ಜಾರಿ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಮಂಜೂರಾತಿ ಕುರಿತು ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಿರಗುಪ್ಪ ಶಾಸಕ ಬಿ.ಎಂ.ನಾಗರಾಜ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.