

ಕುಶಾಲನಗರ: ಸ್ಕೌಟ್ಸ್ ಮತ್ತು ಗೈಡ್ಸ್‌ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವನೆಗಳಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಸಂಪನ್ಮೂಲ ವ್ಯಕ್ತಿಗಳನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಆಯುಕ್ತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ರಾಣಿ ಮಾಚಯ್ಯ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೂಡಿಗೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬುಧವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಪರಿಚಯ ಹಾಗೂ ವಿಶ್ವ ಬಾಲ ಕಾರ್ಮಿಕ ದಿನಾಚರಣೆಯ ಮಹತ್ವ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಭಾಗವಹಿಸುವುದರಿಂದ ಶಿಸ್ತು, ದಕ್ಷತೆ, ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸ್ಕೌಟ್ಸ್, ಗೈಡ್ಸ್ ನ ಧ್ಯೇಯೋದ್ದೇಶಗಳನ್ನು ಅರಿತುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ತಮ್ಮನ್ನು ನೆಲ- ಜಲ, ಅರಣ್ಯ, ವನ್ಯಜೀವಿಗಳು, ಪರಿಸರ ಹಾಗೂ ಜೀವವೈವಿಧ್ಯ ಸಂರಕ್ಷಣೆಗೆ ತೊಡಗಿಸಿಕೊಂಡು ಪರಿಸರ ಸಮತೋಲನ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.
ಪ್ರಾಂಶುಪಾಲ ಕೆ.ಪ್ರಕಾಶ್ ಮಾತನಾಡಿ, ಯಾವುದೇ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗದೆ ಉತ್ತಮ ಶಿಕ್ಷಣ ಪಡೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ ಮಾತನಾಡಿದರು. ನಿಲಯ ಪಾಲಕ ಜಗದೀಶ್, ಶಾಲೆಯ ಶಿಕ್ಷಕ ಎಸ್.ಕೆ.ಚಿದಂಬರ, ನಾಗೇಂದ್ರ, ಎಚ್.ಬಿ.ದಿನೇಶಾಚಾರಿ, ಗಾನವಿ, ಹರಿಣಾಕ್ಷಿ ಇತರರು ಇದ್ದರು.
ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು.