ರಾಜ್ಯದ ಬಗ್ಗೆ ಕೇಂದ್ರ ಸರ್ಕಾರದಿಂದ ತಾರತಮ್ಯ ನೀತಿ

Cong pressmeet
Published on

ರಾಯಚೂರು: ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಿದ್ದು, ರಾಜ್ಯದ ಪಾಲಿನ ತೆರಿಗೆ ಹಣ ಹಾಗೂ ಬರ ಪರಿಹಾರ ಬಿಡುಗಡೆ ಮಾಡದೇ ಅನ್ಯಾಯ ಮಾಡುತ್ತಿದೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಆರೋಪಿಸಿದರು.
ಸ್ಥಳೀಯ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಕೇಂದ್ರದ ಅನ್ಯಾಯವನ್ನು ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಅಭಿಯಾನ ನಡೆಸಿ ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಕೇಂದ್ರ ಸರ್ಕಾರ ರಾಜ್ಯದ ಪಾಲಿನ 1.72 ಲಕ್ಷ ಕೋಟಿ ರೂ. ತೆರಿಗೆ ಹಣವನ್ನು ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಹಲವಾರು ಬಾರಿ ಮನವಿ ಮಾಡಿದರೂ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಸಿಎಂ ಪತ್ರ ಬರೆದರೂ ರಾಯಚೂರಿಗೆ ಏಮ್ಸ್ ಮಂಜೂರು ಮಾಡುತ್ತಿಲ್ಲ.
ರಾಜ್ಯ ಸರ್ಕಾರ ತನ್ನ ಪಾಲಿನ ತೆರಿಗೆ ಹಣ ಪಾವತಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ. ಕಳೆದ 10 ವರ್ಷದ ಆಡಳಿತದಲ್ಲಿ ಬಿಜೆಪಿಯಿಂದ ಜನರಿಗೆ ನೀಡಿದ ಭರವಸೆಗಳು ಒಂದು ಈಡೇರಿಲ್ಲ. ಆದರೆ ಕಾಂಗ್ರೆಸ್ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಈಡೇರಿಸಿದೆ ಎಂದು ಹೇಳಿದರು.
ಪಕ್ಷದ ಕಾರ್ಯಾಧ್ಯಕ್ಷ ಎ.ವಸಂತಕುಮಾರ ಮಾತನಾಡಿ, ಕಳೆದ 10 ವರ್ಷದಲ್ಲಿ ಪ್ರಧಾನಿ ಮೋದಿ ಏನು ಕೆಲಸ ಮಾಡಿದ್ದಾರೆ ಎಂದು ಜನರು ಕೇಳುತ್ತಿದ್ದಾರೆ. ದೇಶದ ಜನರನ್ನು ಒಗ್ಗೂಡಿಸಿ ಸಾಮಾಜಿಕ ನ್ಯಾಯದಡಿ ಕಾಂಗ್ರೆಸ್ ಕೆಲಸ ಮಾಡುತ್ತದೆ. ಅದಕ್ಕೆ ಯಾವುದೇ ಜಾತಿ ಬೇಧಭಾವವಿಲ್ಲದೆ ಗ್ಯಾರಂಟಿಗಳನ್ನು ನೀಡುತ್ತಿರುವುದು ಸಾಕ್ಷಿಯಾಗಿದೆ ಎಂದರು.
ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸ ಹೆಚ್ಚಾಗಿದೆ. ಬಿಜೆಪಿ ಧರ್ಮ ಇಲ್ಲವೇ ಮೋದಿ ಹೆಸರಿನಲ್ಲಿ ಮತ ಕೇಳಬೇಕಾದ ಪರಿಸ್ಥಿತಿಗೆ ಬಂದಿದೆ. ಪಕ್ಷದ ಅಭ್ಯರ್ಥಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಹಂಪಯ್ಯ ನಾಯಕ, ಪಕ್ಷದ ಅಭ್ಯರ್ಥಿ ಜಿ.ಕುಮಾರನಾಯಕ, ಮುಖಂಡರಾದ ಕೆ.ಶಾಂತಪ್ಪ, ಜಯಣ್ಣ, ಅಸ್ಲಂ ಪಾಷಾ, ಜಿ.ಬಸವರಾಜ ರೆಡ್ಡಿ, ರುದ್ರಪ್ಪ ಅಂಗಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net