ಸೂಕ್ತ ಅಭ್ಯರ್ಥಿ ಆಯ್ಕೆಗೆ ಚರ್ಚೆ

24RAM1
Published on

ರಾಮದುರ್ಗ: ಮುಂಬರುವ ಅಕ್ಟೋಬರ್‌ನಲ್ಲಿ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲ ಪಿಕೆಪಿಎಸ್ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿ, ಬ್ಯಾಂಕ್ ಅಭಿವೃದ್ಧಿ ಚಿಂತನೆ ಹೊಂದಿದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕುರಿತು ಚರ್ಚಿಸಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಪಟ್ಟಣದ ಮರಾಠ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸೌಹಾರ್ದ ಸಭೆ ಉದ್ಘಾಟಿಸಿ ಮಾತನಾಡಿ, ಇಂದು ರಾಷ್ಟ್ರೀಕೃತ ಬ್ಯಾಂಕ್‌ಗಳೊಂದಿಗೆ ಬಿಡಿಸಿಸಿ ಬ್ಯಾಂಕ್ ಪೈಪೋಟಿ ನೀಡುತ್ತಿದೆ. ಬ್ಯಾಂಕ್ ಅಭಿವೃದ್ಧಿ ಹಾಗೂ ರೈತರ ಏಳಿಗೆಗೆ ಶ್ರಮಿಸುವ ಅಭ್ಯರ್ಥಿಗಳನ್ನು ನಮ್ಮ ಪಕ್ಷದಿಂದ ಕ್ಷೇತ್ರವಾರು ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಯ್ಕೆ ಮಾಡುತ್ತೇವೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪದಾಧಿಕಾರಿಗಳು ನಮ್ಮ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಜಿಲ್ಲೆಯಲ್ಲಿ ಬಿಡಿಸಿಸಿ ಬ್ಯಾಂಕ್ ಸುಮಾರು 3,400 ಕೋಟಿ ರೂ. ವಹಿವಾಟು ಹೊಂದಿದ್ದು, ರೈತರ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಬ್ಯಾಂಕ್ ಅಭಿವೃದ್ಧಿಪಡಿಸುವ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದರು.

ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಮಾತನಾಡಿ, ಮಾಜಿ ಶಾಸಕ, ಸಹೋದರ ಮಹಾದೇವಪ್ಪ ಯಾದವಾಡ ಅವರು ತಮ್ಮ ಅಧಿಕಾರವಧಿಯಲ್ಲಿ ಶಿಕ್ಷಣ, ಸಹಕಾರಿ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಸಹಕಾರಿ ಕ್ಷೇತ್ರದ ಪ್ರಗತಿಗೆ ಸರ್ವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಿಸುತ್ತಿದ್ದೇವೆ ಎಂದರು.

ಮಾಜಿ ಶಾಸಕ ಅರವಿಂದ ಪಾಟೀಲ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎಸ್.ಢವಣ ಮಾತನಾಡಿದರು. ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ನಿರ್ದೇಶಕ ಮಹಾಂತೇಶ ದೊಡಗೌಡರ, ರಾಜು ಅಂಕಲಗಿ, ಬಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಬಿ.ಎಸ್.ಬೆಳವಣಕಿ, ಡಾ.ಕೆ.ವಿ.ಪಾಟೀಲ, ಪಿ.ಎಂ.ಜಗತಾಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net