

ಹುಬ್ಬಳ್ಳಿ: ಇಲ್ಲಿಯ ಸಾಯಿನಗರದ ಅಚ್ಚವ್ವನ ಕಾಲನಿಯ ಈಶ್ವರ ದೇವಸ್ಥಾನದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ತಗಲಿ 9ಜನ ಅಯ್ಯಪ್ಪ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಚರ್ಚಿಸುವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು.
ಇಲ್ಲಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್‌ಐ)ಗೆ ಮಂಗಳವಾರ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. 9 ಅಯ್ಯಪ್ಪ ಮಾಲಾಧಾರಿಗಳ ಪೈಕಿ ಪ್ರಕಾಶ ಬಾರಕೇರ ಅವರ ದೇಹದ ಭಾಗ ಬಹಳಷ್ಟು ಸುಟ್ಟಿದೆ. ಎಲ್ಲರಿಗೂ ಹೆಚ್ಚಿನ ಕಾಳಜಿ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಕೂಡ ಕೆಎಂಸಿಆರ್‌ಐಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಪರಿಹಾರ ನೀಡಲು ಎಲ್ಲ ಪ್ರಯತ್ನ ಮಾಡಲಾಗುತ್ತದೆ. ಈ ಘಟನೆ ಬಗ್ಗೆ ತನಿಖೆಯಾಗಲಿದೆ ಎಂದರು.
ನಿರ್ದೇಶಕರ ನೇಮಕಕ್ಕೆ ಕ್ರಮ: ಕೆಲ ತಿಂಗಳಿಂದ ಕೆಎಂಸಿಆರ್‌ಐ ಸಂಸ್ಥೆಯಲ್ಲಿ ಪ್ರಭಾರ ನಿರ್ದೇಶಕರು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಕಾಯಂ ನಿರ್ದೇಶಕರ ನೇಮಕಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ಮಾತನಾಡುವೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಸುಮಾರು ಏಳು ಜಿಲ್ಲೆಗಳಿಂದ ತೀವ್ರ ತೊಂದರೆಗೀಡಾದವರು ಚಿಕಿತ್ಸೆಗೆಂದು ಇಲ್ಲಿಗೆ ಬರುತ್ತಾರೆ. ಸ್ವಲ್ಪ ತಪ್ಪು ಆಗಿರಬಹುದು. ಆದರೆ, ಇದೆಲ್ಲಕ್ಕಿಂತ ಆಗಿರುವ ಘಟನೆಗೆ ಸಂಬಂಧಸಿದಂತೆ ಸೂಕ್ತ ಚಿಕಿತ್ಸೆ ನೀಡಲು ಎಲ್ಲರೂ ಪ್ರಯತ್ನಿಸೋಣ. ನಂತರ ಉಳಿದ ಪ್ರಕರಣ ಬಗೆಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಕರಿಗೆ ಸೂಚಿಸುವೆ ಎಂದರು.
ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಡಿಸಿಪಿಗಳಾದ ಮಹಾನಿಂಗ ನಂದಗಾವಿ, ಸಿ.ಆರ್. ರವೀಶ, ಕೆಎಂಸಿಆರ್‌ಐ ನಿರ್ದೇಶಕ ಡಾ.ಎಸ್.ಎಫ್. ಕಮ್ಮಾರ, ಶಹರ ತಹಸೀಲ್ದಾರ್ ಕಲಗೌಡ ಪಾಟೀಲ ಇತರರು ಇದ್ದರು.