ಭೂಮಿ ಕಳೆದುಕೊಂಡ ರೈತರ ಸಮಸ್ಯೆ ಚರ್ಚೆ

dibate
Published on

ಬೈಂದೂರು: ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಅಶೋಕ ನಾಯ್ಕ ಜತೆಯಾಗಿ ಭೇಟಿ ಮಾಡಿ ಭೂಮಿ ಕಳೆದುಕೊಂಡ ರೈತರ ಸಮಸ್ಯೆ ಕುರಿತು ಚರ್ಚೆ ನಡೆಸಿದರು.

1958-1964ರಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಿಂದ ರೈತರು ಭೂಮಿ ಕಳೆದುಕೊಂಡು ಸಮಸ್ಯೆ ಎದುರಿಸುತ್ತಿದ್ದಾರೆ. 9,136 ಎಕರೆ ಅರಣ್ಯ ಭೂಮಿಯಲ್ಲಿ ಪುನರ್ವಸತಿಗಾಗಿ ರಾಜ್ಯ ಸರ್ಕಾರ ಆರಂಭಿಸಿದ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ರೈತರ ಹೆಸರಿಗೆ ಹಕ್ಕು ಪತ್ರ(ಪಟ್ಟಾ) ನೀಡಲಾಗದ ಕಾರಣ ರೈತರು ಹಲವು ಸವಲತ್ತುಗಳಿಂದ ವಂಚಿತರಾಗಿದ್ದಾರೆ. ಮನೆ ನಿರ್ಮಾಣಕ್ಕಾಗಿ ಬ್ಯಾಂಕ್‌ನಿಂದ ಸಾಲ ದೊರೆಯದೆ ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ವಿವರಿಸಿದರು. ಕೇಂದ್ರ ಸರ್ಕಾರದಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದು ಕೇಂದ್ರ ಸಚಿವರು ನಿಯೋಗದ ಸದಸ್ಯರಿಗೆ ಭರವಸೆ ನೀಡಿದರು.

ಈಶ್ವರ ಖಂಡ್ರೆ ಜತೆ ಮಾತುಕತೆ

ಸಂಸದ ಬಿ.ವೈ.ರಾಘವೇಂದ್ರ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರನ್ನೂ ಶುಕ್ರವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಸಮಸ್ಯೆ ಕುರಿತು ಚರ್ಚೆ ನಡೆಸಿದರು. ಸುಪ್ರಿಂಕೋರ್ಟ್‌ನಲ್ಲಿ ಜ.20ರಂದು ಪ್ರಕರಣ ವಿಚಾರಣೆಗೆ ಬರಲಿರುವುದರಿಂದ ಅಷ್ಟರೊಳಗೆ ರಾಜ್ಯಸರ್ಕಾರ ಕೂಡಲೇ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ ರೈತರ ಪರ ನಿಲುವು ತೆಗೆದುಕೊಂಡು ಪರಸ್ಪರ ಸಮನ್ವಯತೆ ಸಾಧಿಸಿ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಸಚಿವ ಖಂಡ್ರೆ ಅವರನ್ನು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net