

ಭದ್ರಾವತಿ: ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಬೀರೇನ್‌ಸಿಂಗ್ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಮಣಿಪುರ ರಾಜ್ಯವು ಕಳೆದ ನಾಲ್ಕು ತಿಂಗಳಿನಿಂದ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ತತ್ತರಿಸಿ ಹೋಗಿದೆ. ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲು ಮಾಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇದು ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಆದರೂ ಇದುವರೆಗೂ ಯಾರನ್ನೂ ಬಂಧಿಸುವ ಪ್ರಯತ್ನ ಮಾಡಿಲ್ಲ. ಈ ಘಟನೆಯ ಜವಾಬ್ದಾರಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಹೊತ್ತುಕೊಳ್ಳಬೇಕು. ನಿರಂತರ ದೌರ್ಜನ್ಯ, ಹಲ್ಲೆ ನಡೆಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಅನುಮಾನ ಮೂಡಿಸಿದೆ ಎಂದು ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದರು.
ಮಹಿಳೆಯರನ್ನು ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿರುವ ದುಷ್ಕರ್ಮಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಸಂತ್ರಸ್ತ ಕುಟುಂಬಗಳ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಹಕ್ಕೊತ್ತಾಯಿಸಿದರು.
ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ಎಂ.ಏಳುಕೋಟಿ, ಶಿವಬಸಪ್ಪ, ನಾಗರಾಜ್,ಆರ್.ತಮ್ಮಯ್ಯ, ಹಾಲಮ್ಮ ಇತರರಿದ್ದರು.