

ಹುಬ್ಬಳ್ಳಿ : ನಗರದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿಧಾನಗತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು, ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದಲ್ಲಿ ಗುರುವಾರ ಸಂಜೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಸಮರ್ಪಕ ಕಾರ್ಯ ಮಾಡುವುದಕ್ಕಾಗಿಯೇ ಸರ್ಕಾರ ಸಂಬಳ ನೀಡುತ್ತದೆ. ಆದರೂ, ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಸೂಚಿಸಿದರು.
ಹಳೇ ಬಸ್ ನಿಲ್ದಾಣದಿಂದ ಸಂಚರಿಸುವ ಬಸ್ಗಳನ್ನು 120 ದಿನಗಳವರೆಗೆ ಬೇರೆಡೆ ಸ್ಥಳಾಂತರಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು. ಈ ಅವಧಿಯಲ್ಲಿ ಕಾಮಗಾರಿಗೆ ವೇಗ ನೀಡುವಂತೆ ಸೂಚಿಸಲಾಯಿತು.
ಕಲ್ಯಾಣ ಕರ್ನಾಟಕ ಕಾಮಗಾರಿ ನಿರ್ವಹಣೆ ಹೊತ್ತಿರುವ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರದೀಪ ಕೆ. ಅವರಿಗೆ ಕಾಮಗಾರಿಯ ಸಂಪೂರ್ಣ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ತಹಶೀಲ್ದಾರ ಕಲ್ಲನಗೌಡ ಪಾಟೀಲ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗುಂಡಳ್ಳಿ, ಡಿಸಿಪಿ ರವೀಶ ನಂದಗಾವಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.