

ಮದ್ದೂರು: ಸುಪ್ರೀಂ ಕೋರ್ಟ್ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ತಮಿಳುನಾಡಿಗೆ ನೀರು ಹರಿಸುವಂತೆ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಗುರುವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಪಿಕಾರ್ಡ್ ಬ್ಯಾಂಕ್ ಆವರಣದಿಂದ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಪ್ರತಿಭಟನಾಕಾರರು ಕಾವೇರಿ ನೀರಾವರಿ ನಿಗಮದ ಕಚೇರಿಗೆ ಆಗಮಿಸಿದರು. ಈ ವೇಳೆ ಜಿಲ್ಲೆಯ ಜನಪ್ರತಿನಿಧಿಗಳು, ರಾಜ್ಯದ ಸಂಸದರು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಬಾಯಿ ಬಡಿದುಕೊಂಡು, ಆಕ್ರೋಶ ವ್ಯಕ್ತಪಡಿಸಿದ್ದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮಾತನಾಡಿ, ರಾಜ್ಯದಲ್ಲಿ ಮಳೆ ಇಲ್ಲದೆ ತೀವ್ರ ಬರ ಎದುರಾಗಿದೆ. ಜತೆಗೆ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಹೀಗಿದ್ದರೂ 15 ದಿನಗಳವರೆಗೆ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ. ರಾಜ್ಯ ಸರ್ಕಾರ ರಾಜ್ಯ ಸ್ಥಿತಿಗತಿ ಕುರಿತು ಮನವರಿಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರಲ್ಲದೆ, ಕಾಂಗ್ರೆಸ್ ಸರ್ಕಾರ ಅಧಿಕಾರದ ಆಸೆಗಾಗಿ ರೈತರ ಹಿತ ಮರೆತು ತಮಿಳುನಾಡಿಗೆ ನೀರು ಹರಿಸುತ್ತಿರುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸಂಘಟನೆಗಳ ಮುಖಂಡರಾದ ಕೆ.ಜಿ.ಉಮೇಶ್, ಸೊ.ಶಿ.ಪ್ರಕಾಶ್, ಶಿವಲಿಂಗಯ್ಯ, ಚಂದ್ರ, ವೀರಪ್ಪ, ಜಗ್ಗಿ ಶೀನ, ರಾಮಲಿಂಗಯ್ಯ, ಉಮೇಶ್, ವಳಗೆರೆಹಳ್ಳಿ ಉಮೇಶ್, ಲೋಕೇಶ್, ಕೆ.ಮಲ್ಲೇಗೌಡ, ಪ್ರಸನ್ನಕುಮಾರ್, ವೆಂಕಟೇಶ್, ಯಾಕೂಬ್ ಇದ್ದರು.