ಯಾದಗಿರಿ : ಏಪ್ರಿಲ್ 24, (ಕ.ವಾ) : ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು 2025ರ ಏಪ್ರಿಲ್ 5 ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಆದೇಶವನ್ನು ಹೊರಡಿಸಿದ್ದಾರೆ.
ಸರ್ಕಾರದ ಆದೇಶದನ್ವಯ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚರಣಾ ಆಯೋಗವನ್ನು ರಚಿಸಲಾಗಿದೆ. ಈ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಅದರಂತೆ ಕ್ರಮವಹಿಸಲು 2025ರ ಏಪ್ರಿಲ್ 5 ರಂದು ನ್ಯಾಯಮೂರ್ತಿ ಹೆಚ್.ಎಸ್.ನಾಗಮೋಹನ ದಾಸ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಹಾಗೂ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕ್ ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲು ಆದೇಶಿಸಿದೆ. ಯಾದಗಿರಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಆದೇಶಿಸಿದೆ.
ಜಿಲ್ಲಾ ಮಟ್ಟದ ಸಮನ್ವಯ ಸಮಿತಿ : ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಅಧ್ಯಕ್ಷರು, ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಾಧ್ಯಕ್ಷರು, ಸದಸ್ಯರುಗಳಾದ ಯಾದಗಿರಿ ಅಪರ ಜಿಲ್ಲಾಧಿಕಾರಿಗಳು, ಯಾದಗಿರಿ ನಗರಸಭೆ ಪೌರಾಯುಕ್ತರು, ಯಾದಗಿರಿ ಉಪ ವಿಭಾಗಾಧಿಕಾರಿಗಳು, ಯಾದಗಿರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು, ಯಾದಗಿರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು, ಯಾದಗಿರಿ ಯೋಜನಾ ಇಲಾಖೆ ಜಿಲ್ಲಾ ಸಾಂಖ್ಯಿತ ಅಧಿಕಾರಿಗಳು, ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು, ಯಾದಗಿರಿ ಡಿಯುಡಿಸಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು, ಸದಸ್ಯರುಗಳು ಮತ್ತು ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚಿಸಿದೆ.
ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳು ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಸುಸೂತ್ರವಾಗಿ ಯಾವುದೇ ಲೋಪವಿಲ್ಲದೆ ಯಶಸ್ವಿಯಾಗಿ ನಡೆಸಲು ಮೇಲುಸ್ತುವಾರಿ ಜವಬ್ದಾರಿಯನ್ನು ವಹಿಸಿಕೊಂಡು ನಿಗದಿತ ಅವಧಿಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.