

ಮೈಸೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅನಧಿಕೃತ ನಿವೇಶನ, ಕಟ್ಟಡಗಳಿಗೆ ನಮೂನೆ-3 ವಿತರಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಶಾಸಕ ಜಿ.ಟಿ. ದೇವೇಗೌಡ ಮನವಿ ಮಾಡಿದರು.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಸೋಮವಾರ ಬೋಗಾದಿ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ ನಮೂನೆ-3 ನೀಡಲು ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಿದರು. ಅನಧಿಕೃತ ಕಟ್ಟಡಗಳಿಗೂ ನಮೂನೆ -3 ವಿತರಿಸಲು 2-1-2023 ರಂದು ಸರ್ಕಾರ ಆದೇಶ ಹೊರಡಿಸಿದೆ. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಸಮಪರ್ಕವಾಗಿ ನಮೂನೆ -3 ವಿತರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಜಿ.ಟಿ.ದೇವೇಗೌಡರ ಗಮನ ಸೆಳೆದಿದ್ದರು. ಅಧಿಕಾರಿಗಳಿಂದ ಮಾಹಿತಿ ಪಡೆದ ಜಿ.ಟಿ. ದೇವೇಗೌಡ ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ, ಸರ್ಕಾರದ ಮುಖ್ಯಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯನ್ನು ಭೇಟಿಯಾಗಿ ಸಾರ್ವಜನಿಕರು ಆಸ್ತಿಗಳನ್ನು ಮಾರಲು, ಕೊಳ್ಳಲು, ಸಾಲ ಸೌಲಭ್ಯ ಪಡೆಯಲು ತೊಂದರೆಯಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದರು.
ಮೈಸೂರು ನಗರ ಪಾಲಿಕೆ, ಹೂಟಗಳ್ಳಿ ನಗರಸಭೆ, ರಮ್ಮನಹಳ್ಳಿ, ಕಡಕೊಳ, ಬೋಗಾದಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಡಾವಣೆಗಳಿಗೆ ಮೂಲಸೌಕರ್ಯಗಳನ್ನು ಕೈಗೊಳ್ಳಲು ಸರ್ಕಾರ ಅನುದಾನ ನೀಡುತ್ತಿಲ್ಲ. ಆದ್ದರಿಂದ ಬಡಾವಣೆಯ ಆಸ್ತಿಗಳಿಗೆ ಖಾತಾ ಮಾಡಿಕೊಟ್ಟರೆ ಹಾಗೂ ಕಂದಾಯ ವಸೂಲಿ ಮಾಡಿದರೆ ನಗರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಆದಾಯ ದೊರೆಯುವ ಜತೆಗೆ ಬಡಾವಣೆಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಬಹುದು. ಆದ್ದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿತರಿಸುವ ಖಾತಾ-ಎ ಮತ್ತು ಬಿ ರೀತಿಯಲ್ಲೇ ಮೈಸೂರಿನ ನಗರ ಸ್ಥಳೀಯ ಸಂಸ್ಥೆಗಳು ನಮೂನೆ-3 ವಿತರಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.