

ಲಿಂಗಸುಗೂರು: ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಒದಗಿಸಲು ಬದ್ಧನಾಗಿದ್ದೇನೆಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು. ಕೆಕೆಆರ್‌ಡಿಬಿ ಅನುದಾನ ಬಳಕೆ ಮಾಡಲು ಕೆಲ ನಿರ್ಬಂಧಗಳಿವೆ.
ಈ ಭಾಗದ ಎಲ್ಲ ಶಾಸಕರು ನಿರ್ಬಂಧ ತೆಗೆದು ಹಾಕಲು ಕೇಳಿದ್ದೇವೆ. ಸಡಿಲಿಸಿದರೆ, ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಲ್ಯಾಪ್‌ಟಾಪ್ ಒದಗಿಸಲಾಗುವುದು. ವಿದ್ಯಾರ್ಥಿಗಳ ಬೇಡಿಕೆಯಂತೆ ಕಾಲೇಜಿನಲ್ಲಿ ಆಡಿಟೋರಿಯಂ ಒದಗಿಸುವುದಾಗಿ ಭರವಸೆ ನೀಡಿದರು.
ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಮಾತನಾಡಿ, ಪರಿಶಿಷ್ಟ ಜಾತಿ-ಪಂಗಡದವರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ವಿಶೇಷ ಅನುದಾನ ಒದಗಿಸಿದೆ. ಎಲ್ಲ ವಿದ್ಯಾರ್ಥಿಗಳನ್ನು ಸಮಾನವಾಗಿ ಕಾಣುವ ಉದ್ದೇಶ ನಮ್ಮದಾಗಿದೆ.
ಕಳೆದ ವರ್ಷ ಸಿಎಂಗೆ ಪತ್ರ ಬರೆದು ಶಾಲಾ-ಕಾಲೇಜುಗಳಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಒದಗಿಸುವಂತೆ ಕೇಳಿಕೊಂಡಿದ್ದೆ. ಮುಂದಿನ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲು ಹೇಳಿದ್ದರು ಎಂದು ತಿಳಿಸಿದರು.