

ಲಿಂಗಸುಗೂರು: ನಾರಾಯಣಪುರ ಬಲದಂಡೆ ವಿತರಣಾ ನಾಲೆಗಳ ಆಧುನೀಕರಣ ಕಾಮಗಾರಿ ಅಪೂರ್ಣಗೊಂಡಿದ್ದು, ಗುತ್ತಿಗೆದಾರರು ಮತ್ತು ಕೆಬಿಜೆಎನ್‌ಎಲ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಸಿ ಕಚೇರಿ ಎಫ್‌ಡಿಸಿ ಅಮರೇಶಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.
ಸರ್ಕಾರ ಬಲದಂಡೆ ವಿತರಣಾ ನಾಲೆಗಳ ಆಧುನೀಕರಣಕ್ಕೆ ಅಂದಾಜು 1400 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆದಿದೆ. ಆದರೆ, ಸರ್ಕಾರದ ನಿಯಮಾನುಸಾರ ಕಾಮಗಾರಿ ನಡೆಯದೆ ಕೃಷಿ ಜಮೀನುಗಳಿಗೆ ನೀರು ದೊರೆಯದಂತಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸೂಚಿಸುವ ಮೂಲಕ ಜಮೀನುಗಳಿಗೆ ಸಮರ್ಪಕವಾಗಿ ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.