

ಮದ್ದೂರು: ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ಹಾಗೂ ಪಠ್ಯ ಪರಿಕರಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಂಪೂರ್ಣ ಶುಲ್ಕವನ್ನು ಭರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಟ್ರಸ್ಟ್ ವತಿಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್, ಪಠ್ಯ ಪರಿಕರಗಳನ್ನು ವಿತರಣೆ ಮಾಡುವ ಜತೆಗೆ ಇನ್ನಿತರ ಮೂಲಸೌಕರ್ಯಗಳನ್ನು ನೀಡಲಾಗುತ್ತಿದೆ ಎಂದರು.
ನಾನು ಶಾಸಕನಾದ 2 ವರ್ಷದಲ್ಲಿ ಸರ್ಕಾರದ ಅನುದಾನದಲ್ಲಿ ಸರ್ಕಾರಿ ಶಾಲೆಗಳಿಗೆ ಅಭಿವೃದ್ದಿಗೆ ಬಹಳಷ್ಟು ಶ್ರಮಿಸಿದ್ದೇನೆ. ಹಲವಾರು ಶಾಲೆಗಳಿಗೆ ಹೊಸ ಕೊಠಡಿಗಳು, ಕಾಂಪೌಂಡ್‌ಗಳು, ಶೌಚಗೃಹಗಳ ನಿರ್ಮಾಣ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದೇನೆ ಎಂದರು.
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ. ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಪುರಸಭಾಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಟಿ.ಅರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಪುರಸಭಾ ಸದಸ್ಯರಾದ ಎಂ.ಬಿ.ಸಚಿನ್, ಸರ್ವಮಂಗಳಾ, ಸಿದ್ದರಾಜು, ಬಿಇಒ ಧನಂಜಯ ಇದ್ದರು.