300ಕ್ಕೂ ಹೆಚ್ಚು ಜನರಿಗೆ ಶ್ರವಣ ಸಾಧನ ವಿತರಣೆ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

Distribution of hearing aids mandya
Published on

ಮಂಡ್ಯ: ಜಿಲ್ಲೆಯಲ್ಲಿ ಶ್ರವಣ ದೋಷವಿರುವ 300ಕ್ಕೂ ಹೆಚ್ಚು ಜನರಿಗೆ ಸಾಧನ ನೀಡುವ ಮೂಲಕ ಅವರ ಸಮಸ್ಯೆ ನಿವಾರಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಇಲಾಖೆ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಉಚಿತ ಶ್ರವಣ ಯಂತ್ರ ಸಾಧನಗಳನ್ನು ವಿತರಿಸಿ ಮಾತನಾಡಿದರು. ಲಯನ್ಸ್ ಸಂಸ್ಥೆಯ ದೇವೇಗೌಡ ಅವರ ಕೋರಿಕೆ ಮೇರೆಗೆ ಜಿಲ್ಲೆಯಲ್ಲಿರುವ ಶ್ರವಣ ದೋಷದಿಂದ ಬಳಲುತ್ತಿರುವವರನ್ನು ಗುರುತಿಸಿ ಅವರಿಗೆ ಸರ್ಕಾರದಿಂದ ಶ್ರವಣ ಸಾಧನ ಕೊಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಂದಲೂ ಸುಮಾರು 300ಕ್ಕೂ ಹೆಚ್ಚು ಜನರನ್ನು ಗುರುತಿಸಿ ಅವರನ್ನು ಬೆಂಗಳೂರಿಗೆ ಕಳುಹಿಸಿ ತಪಾಸಣೆ ಮಾಡಲಾಗಿತ್ತು ಎಂದು ವಿವರಿಸಿದರು.

ತಪಾಸಣೆಗೆ ಒಳಗಾದ ಎಲ್ಲರಿಗೂ ಸುಮಾರು 40 ರಿಂದ 50 ಸಾವಿರ ರೂ. ಮೌಲ್ಯದ ಶ್ರವಣ ಸಾಧನವನ್ನು ಉಚಿತವಾಗಿ ಸರ್ಕಾರದಿಂದ ನೀಡಲಾಗುತ್ತಿದೆ. ಇಂದು ಸಾಂಕೇತಿಕವಾಗಿ ಕೆಲವರಿಗೆ ಮಾತ್ರ ವಿತರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ನೇತೃತ್ವದಲ್ಲಿ ಎಲ್ಲರಿಗೂ ವಿತರಿಸಲಾಗುವುದು ಎಂದರು.

ಶಾಸಕ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ತಾಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net